ಬೆಂಗಳೂರು: ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇದಲ್ಲದೆ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಶನಿವಾರವೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಧ್ಯ ಕರ್ನಾಟಕ ಜಿಲ್ಲೆ ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೊಡಗು, ತುಮಕೂರಿನಲ್ಲೂ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಐಟಿ ನಗರದಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ಭಾರಿ ಮಳೆಗೆ ಹಾನಿಯಾಗಿದೆ.
Advertisement