ಬರ ಪರಿಹಾರ: ಕೇಂದ್ರಕ್ಕೆ ಸುಪ್ರೀಂ ಚಾಟಿ, ಯತ್ನಾಳ್ ವಿರುದ್ಧ FIR, ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆ: ಈ ದಿನದ ಸುದ್ದಿ ಮುಖ್ಯಾಂಶಗಳು-08-04-2024

ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.
ಬರ ಪರಿಹಾರ: ಕೇಂದ್ರಕ್ಕೆ ಸುಪ್ರೀಂ ಚಾಟಿ, ಯತ್ನಾಳ್ ವಿರುದ್ಧ FIR, ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆ: ಈ ದಿನದ ಸುದ್ದಿ ಮುಖ್ಯಾಂಶಗಳು-08-04-2024

1. ಬರ ಪರಿಹಾರ: ಕೇಂದ್ರಕ್ಕೆ ಸುಪ್ರೀಂ ಚಾಟಿ

ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ರಾಜ್ಯ ಸರ್ಕಾರ ಬರ ಪರಿಹಾರ ಕೊಡಿಸುವಂತೆ ಕೇಂದ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರ ಹಾಗೂ ರಾಜ್ಯಗಳ ನಡುವೆ ವಾದಗಳಾಗುವುದು ಬೇಡ ಎಂದೂ ಸುಪ್ರೀಂ ಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ. ಕೇಂದ್ರಕ್ಕೆ ಈ ವಿಷಯವಾಗಿ ನೊಟೀಸ್ ಜಾರಿಗೊಳಿಸುವುದಾಗಿ ಕೋರ್ಟ್ ಮೌಖಿಕವಾಗಿ ಹೇಳಿತು.

ಆದರೆ, ಕೇಂದ್ರ ಸರ್ಕಾರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹಾಗೂ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೊಟೀಸ್ ನೀಡದಂತೆ ಮನವಿ ಮಾಡಿದ್ದು, ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು 2 ವಾರಗಳಲ್ಲಿ ಈ ವಿಷಯವಾಗಿ ಸುಪ್ರೀಂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸುವುದಾಗಿ ಭರವಸೆ ನೀಡಿದ್ದಾರೆ. ಕರ್ನಾಟಕ ಸರ್ಕಾರದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

2. 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕಳೆದ ತಿಂಗಳು ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

3. ಶೋಭಾ ಕರಂದ್ಲಾಜೆ ಕಾರು- ಬೈಕ್ ನಡುವೆ ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಕೆಆರ್ ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು ಟಿಸಿ ಪಾಳ್ಯ ನಿವಾಸಿ 60 ವರ್ಷದ ಪ್ರಕಾಶ್ ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕಾರಿನ ಡೋರ್ ತೆರೆದಾಗ ಹಿಂಬದಿಯಿಂದ ಬರುತ್ತಿದ್ದ ಪ್ರಕಾಶ್ ಬೈಕ್ ಗೆ ತಾಗಿ ಕೆಳಗೆ ಬಿದ್ದಿದ್ದು ಅವರ ಮೇಲೆ ಖಾಸಗಿ ಬಸ್‌ ಹರಿದಿದೆ. ಕಾರಿನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ ಈ ಘಟನೆ ನಿಜಕ್ಕೂ ದುಃಖ ತಂದಿದೆ. ಪಕ್ಷದ ವತಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದಾರೆ.

4. ಕರ್ನಾಟಕ-ಆಂಧ್ರ ಗಡಿಯಲ್ಲಿ ಸ್ಫೋಟಕ ವಶಕ್ಕೆ

ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಾರಿನಲ್ಲಿದ್ದ ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಮತ್ತೊಂದೆಡೆ, CCB ಪೊಲೀಸರು ನಗರದಲ್ಲಿ 30.92 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದು, 5 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳಿದ್ದ ಗ್ಯಾಂಗ್ ನವರು 40 ಲಕ್ಷ ನೀಡಿದರೆ ವಿವಿಧ ಕಂಪನಿಗಳ ಸಿಎಸ್‌ಆರ್ ನಿಧಿಯಡಿ ಒಂದು ಕೋಟಿ ರೂಪಾಯಿ ಕೊಡಿಸುವುದಾಗಿ ಭರವಸೆ ನೀಡಿ ಟ್ರಸ್ಟ್‌ ಗಳನ್ನು ಟಾರ್ಗೆಟ್ ಮಾಡುತ್ತಿದ್ದರು, ಟ್ರಸ್ಟ್ ಸದಸ್ಯರಿಗೆ ಮನವರಿಕೆ ಮಾಡಿಕೊಟ್ಟ ನಂತರ ಹಣವನ್ನು ಪಡೆದು ಗ್ಯಾಂಗ್ ಪರಾರಿಯಾಗುತ್ತಿತ್ತು ಎಂದು ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.

5. ಧಾರವಾಡದಲ್ಲಿ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆ

ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ಪ್ರಹ್ಲಾದ್ ಜೋಶಿ, ವೀರಶೈವ-ಲಿಂಗಾಯತ ಮತ್ತು ಇತರ ಸಮುದಾಯಗಳನ್ನು ತುಳಿಯಲು ನೋಡುತ್ತಿದ್ದಾರೆ ಆದ್ದರಿಂದ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಕಾಲ ಮಿಂಚಿಲ್ಲ. ಇನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಭಾನುವಾರ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಈಮಧ್ಯೆ, ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ರಕ್ಷಾ ರಾಮಯ್ಯಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com