'Very Sorry' ಮೃತ ನೇಹಾ ತಂದೆಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ. ಮುರುಘಾ ಮಠದ ಶ್ರೀಗಳಿಗೆ ಮತ್ತೆ ಜೈಲುವಾಸ! - ಈ ದಿನದ ಸುದ್ದಿ ಮುಖ್ಯಾಂಶಗಳು 23-04-2024

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

1. ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಕಾಂಗ್ರೆಸ್ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿಧಾನ ಸೌಧದ ಗಾಂಧಿ ಪ್ರತಿಮೆ ಮುಂದೆ ಇಂದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ಬರದಿಂದ ಕರ್ನಾಟಕದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು. ಕರ್ನಾಟಕಕ್ಕೆ ನ್ಯಾಯ ಕೊಡಿ, ಬರ ಪರಿಹಾರ ಕೂಡಲೇ ಬಿಡುಗಡೆ ಮಾಡಿ ಚೊಂಬೇಶ್ವರ ಎಂದು ಒಕ್ಕೊರಲಿನಿಂದ ಆಗ್ರಹಿಸಿದರು. ಮೋದಿ ಗೋ ಬ್ಯಾಕ್, ಗೋಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಗೋ ಬ್ಯಾಕ್ ನಿರ್ಮಲಾ ಸೀತಾರಾಮನ್ ಎಂಬ ಘೋಷಣೆಗಳನ್ನು ಕೂಗಿದರು. ಈ ಮಧ್ಯೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯೆಲ್ರೆನ್ನು ಈ ಕೂಡಲೇ ಅಮಾನತು ಮಾಡಿ ತನಿಖೆಗೆ ಆದೇಶಿಸಬೇಕೆಂದು ಬಿಜೆಪಿ ನಿಯೋಗ ಆಗ್ರಹಿಸಿತು.

2. ಲೋಕಸಭೆ ಚುನಾವಣೆ: ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಇನ್ನೆರಡು ದಿನ ಬಾಕಿ ಉಳಿದಿದೆ. ಮೊದಲ ಹಂತದಲ್ಲಿ ಏಪ್ರಿಲ್‌ 26 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬೆಂಗಳೂರಿನಲ್ಲಿ ನಾಳೆ ಅಂದರೆ ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ನಿಷೇಧಾಜ್ಞೆ ವೇಳೆ ಯಾವುದೇ ಬಹಿರಂಗ ಪ್ರಚಾರ, ಪ್ರತಿಭಟನೆ ಮಾಡುವಂತಿಲ್ಲ. ಐದಕ್ಕು ಹೆಚ್ಚು ಜನರು ಒಂದೇ ಕಡೆ ಸೇರುವಂತಿಲ್ಲ. ನಾಳೆ ಸಂಜೆ 6ರಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧವಿರುತ್ತದೆ.

3. ನೇಹಾ ತಂದೆ ನಿರಂಜನ್ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ

ಕಾಲೇಜು ಆವರಣದಲ್ಲಿ ಹತ್ಯೆಗೀಡಾದ ನೇಹಾ ತಂದೆ ನಿರಂಜನ್ ಹಿರೇಮಠ ಅವರೊಂದಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿ, ವೆರಿ ಸಾರಿ, ನಾವು ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದ್ದಾರೆ. ನಿರಂಜನ ಹಿರೇಮಠ ಅವರ ನಿವಾಸಕ್ಕೆ ಇಂದು ಸಚಿವ ಹೆಚ್.ಕೆ ಪಾಟೀಲ್ ಭೇಟಿ ನೀಡಿ, ಸಾಂತ್ವನ ಹೇಳಿದರು. ಈ ವೇಳೆ ಹೆಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು. ಆಗ ಸಿಎಂ ಸಿದ್ದರಾಮಯ್ಯ, ನೇಹಾ ತಂದೆ ನಿರಂಜನ ಹಿರೇಮಠ ಜೊತೆ ಮಾತನಾಡಿ, ನಾವು ನಿಮ್ಮ ಜೊತೆ ಇರುತ್ತೇವೆ, ವೆರಿ ಸಾರಿ ಎಂದರು. ಪ್ರಕರಣವನ್ನು ಸಿಐಡಿಗೆ ನೀಡಿದ್ದಕ್ಕೆ ನಿರಂಜನ ಹಿರೇಮಠ ಸಿಎಂಗೆ ಧನ್ಯವಾದ ತಿಳಿಸಿದರು.

4. ಮುರುಘಾ ಮಠದ ಶ್ರೀಗಳಿಗೆ ಮತ್ತೆ ಜೈಲುವಾಸ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ರದ್ದು ಮಾಡಿದೆ. ಈ ಮೂಲಕ ಮತ್ತೆ ಸ್ವಾಮೀಜಿ ಜೈಲು ಸೇರಲಿದ್ದಾರೆ. ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್‌, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿ ಮುರುಘಾ ಶ್ರೀಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

5. ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಸಾವು

ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com