ಪ್ರಜ್ವಲ್ ರೇವಣ್ಣ ಉಚ್ಛಾಟನೆ?, ತಪ್ಪಾಗಿದ್ದರೆ ಶಿಕ್ಷೆ ಎಂದ HDK, ಶ್ರೀನಿವಾಸ್ ಪ್ರಸಾದ್ ನಿಧನ, ಮುರುಘಾ ಶ್ರೀ ಜೈಲಿಗೆ: ಈ ದಿನದ ಸುದ್ದಿ ಮುಖ್ಯಾಂಶಗಳು-29-04-2024

ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.

1. JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಸಾಧ್ಯತೆ

ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ. ನಾಳೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಮಾಡುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಇದೇ ವೇಳೆ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನೂ ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ದರೆ ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು ಎಂಬ ನನ್ನ ನಿಲುವು ಮುಂದುವರೆಯಲಿದೆ ಎಂದು ಹೇಳಿದರು.

ಈಮಧ್ಯೆ, ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಒತ್ತಾಯಿಸಿ ಮುಳಬಾಗಲಿನ ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಟ್ವೀಟ್ ಮಾಡಿದ್ದರೆ, ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಪತ್ರ ಬರೆದಿದ್ದಾರೆ.

2. FSLಗೆ ಪ್ರಜ್ವಲ್ ರೇವಣ್ಣ ವಿಡಿಯೋ: G ಪರಮೇಶ್ವರ್

ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ, ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿದ್ದೇವೆ. ತನಿಖಾ ಅಧಿಕಾರಿಗಳು ಪೆನ್ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಲ್ಲ ವಿಡಿಯೋಗಳನ್ನು FSLಗೆ ಕಳುಹಿಸುತ್ತೇವೆ ಎಂದು ಹೇಳಿದರು.

3. ಪ್ರಜ್ವಲ್ ರೇವಣ್ಣ ವಿರುದ್ಧ ಮುಂದುವರೆದ ಪ್ರತಿಭಟನೆ

ಈಮಧ್ಯೆ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹುಬ್ಬಳ್ಳಿ, ಹಾಸನ ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

4. ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರು ಇತ್ತೀಚೆಗೆ ರಾಜಕೀಯ ನಿವೃ ತ್ತಿ ಘೋಷಿಸಿದ್ದರು. ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಮೂಲತಃ ಮೈಸೂರಿನವರಾದ ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು ಮತ್ತು ಎರಡು ಬಾರಿ ನಂಜನಗೂಡು ಕ್ಷೇತ್ರದಿಂದ ಶಾಸಕರಾಗಿದ್ದರು.

5. ಮುರುಘಾ ಶ್ರೀ ಮತ್ತೆ ಜೈಲಿಗೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ. ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಕಳೆದ ಮಂಗಳವಾರ ರದ್ದು ಮಾಡಿತ್ತು ಮತ್ತು ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿಗೆ ಸೂಚಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಶರಣಾದರು.

6. ಮಾಜಿ ಮೇಯರ್ ಶರಣಕುಮಾರ್ ಮೋದಿ ವಿರುದ್ಧ ಚುನಾವಣಾ ಆಯೋಗ ಪ್ರಕರಣ

ಇತ್ತೀಚೆಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. ಕಳೆದ ಶನಿವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಶರಣಕುಮಾರ್ ಮೋದಿಯವರ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆರಹಿತ 1.99 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಎಫ್‌ಐಆರ್ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com