
ಬೆಂಗಳೂರು: ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ.
ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಇದರಿಂದ ಚಿಂತೆಗೀಡಾಗಿದ್ದ ಕರ್ನಾಟಕದ ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ,
ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂಸದ ತೇಜಸ್ವಿ ಸೂರ್ಯ ಅವರು ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ಇಂದು ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸೋಮಣ್ಣ ಅವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ. ಕರ್ನಾಟಕ & ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಂದೆಂದಿಗೂ ಕಟಿಬದ್ಧವಾಗಿದೆ.
ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ಶ್ರೀ ವಿ ಸೋಮಣ್ಣ ರವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.
ಆಗಸ್ಟ್ 3ರಂದು ಪರೀಕ್ಷೆ ನಡೆಯಲಿದ್ದು , ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್ ನಲ್ಲಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಆಯ್ಕೆ ನೀಡಲಾಗಿದೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಕನ್ನಡಿಗ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿತ್ತು. ಅಲ್ಲದೆ, ಆಕ್ರೋಶ ಕೂಡ ವ್ಯಕ್ತವಾಗಿತ್ತು.
Advertisement