ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಅವರು ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಜುಲೈ 26 ರಂದು ಮಂಜೂರಾತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು, ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ನಲ್ಲಿ ಸಿಎಂ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದು ಎಂಬುದು ಮೇಲ್ನೋಟಕ್ಕೆ ತೋರುತ್ತಿದೆ ಎಂದು ರಾಜ್ಯಪಾಲರು ತಿಳಿಸಿದ್ದರು. ಆದರೂ, ಪ್ರಾಸಿಕ್ಯೂಷನ್'ಗೆ ವಿಳಂಬ ನೀತಿ ಅನುಸರಿಸುತ್ತಿರುವುದೇಕೆ ಎಂಬುದು ತಿಳಿಯುತ್ತಿಲ್ಲ ಎಂದು ಅಬ್ರಹಾಂ ಅವರು ಹೇಳಿದ್ದಾರೆ.
ಇದೀಗ ನಾನು ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಜನಪ್ರತಿನಿಧಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಅಥವಾ ಹೈಕೋರ್ಟ್‌ನಲ್ಲಿ ವಿಶೇಷ ಮೊಕದ್ದಮೆ ಹೂಡಲು ಚಿಂತನೆ ನಡೆಸುತ್ತಿದ್ದೇನೆಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್'ಗೆ ಅನುಮತಿ ತೋಕಿ ನಾನು ಮನವಿ ಸಲ್ಲಿಸಿದ್ದೆ. ಆದರೆ, ಮನವಿಯನ್ನು ತಿರಸ್ಕರಿಸಿದ್ದರು. ಆದರೆ, ಈ ಕ್ರಮ ಸರಿಯಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ್ದೆ. ಇದೀಗ ಮುಡಾ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದೇನೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧವೂ ಹೋರಾಟ ನಡೆಸಿದ್ದೆ, ಈ ಪ್ರಕರಣದಲ್ಲಿ ಎಸ್‌ಐಟಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಕೋರಿತ್ತು ಎಂದು ಹೇಳಿದ್ದಾರೆ. ಏತನ್ಮಧ್ಯೆ, ಪ್ರವಾಸದಲ್ಲಿರುವ ರಾಜ್ಯಪಾಲ ಗೆಹ್ಲೋಟ್ ಅವರಕು ಭಾನುವಾರ ಸಂಜೆ ರಾಜಭವನಕ್ಕೆ ಮರಳಲಿದ್ದಾರೆಂದು ವರದಿಗಳು ತಿಳಿಸಿವೆ.
Advertisement