ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು ಮಾಡಲು ಅನುಮತಿ ನೀಡುತ್ತಾರಾ, ಇಲ್ಲವೇ? ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು. ಅಲ್ಲದೆ ಪ್ರಕರಣ ದಾಖಲು ಮಾಡಲು ಅನುಮತಿ ಏಕೆ ನೀಡಬಾರದು? ಎಂದೂ ಪ್ರಶ್ನಿಸಿದ್ದರು. ಇದು ರಾಜಕೀಯವಾಗಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಹಗರಣ ಪ್ರಕರಣ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಮಿತ್ರ ಪಕ್ಷಗಳು ಕೈಗೊಂಡಿದ್ದ ಪಾದಯಾತ್ರೆ ಪೂರ್ಣಗೊಂಡಿದ್ದು, ಇದೀಗ ಪ್ರತಿಪಕ್ಷಗಳು ಮಳೆ ಅವಾಂತರ ವಿಚಾರದತ್ತ ಗಮನಹರಿಸಿ, ಸರ್ಕಾರದವನ್ನು ತರಾಟೆಗೆ ತೆಗೆದುಕೊಂಡಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿದ್ದ ನೋಟಿಸ್ ವಾಪಸ್ ಪಡೆದುಕೊಳ್ಳಬೇಕು ಹಾಗೂ ಟಿಜೆ ಅಬ್ರಹಾಂ ಅವರು ಪ್ರಾಸಿಕ್ಯೂಷನ್‌ಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕಾರ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.
ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್ ಕಾನೂನು ಮತ್ತು ಸಂವಿಧಾನ ಬಾಹಿರವಾಗಿದೆ. ರಾಜಭವನವನ್ನು ಬಳಸಿಕೊಂಡು ಬಹುಮತದ ಸರ್ಕಾರದವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಆದರೆ, ರಾಜ್ಯಪಾಲರು ಇನ್ನೂ ಯಾವುದೇ ನಿರ್ಧಾರಗಳನ್ನೂ ಕೈಗೊಂಡಿಲ್ಲದಿರುವುದರಿಂದ ಅವರ ನಡೆ ತೀವ್ರ ಕುತೂಹಲವನ್ನು ಮೂಡಿಸಿದೆ.
ಈ ನಡುವೆ ಆಡಳಿತಾರೂಢ ಸರ್ಕಾರದ ನಾಯಕರು ರಾಜ್ಯಪಾಲರು ಸಚಿವರ ಸಲಹೆಗಳಿಗೆ ವ್ಯತಿರಿಕ್ತವಾಗಿ ನಡೆಯುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳುತ್ತಿದ್ದರೆ, ವಿಪಕ್ಷ ನಾಯಕರು ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಪ್ರಜ್ಞಾವಂತ ಮತ್ತು ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯವನ್ನು ಗೌರವಿಸುತ್ತಾರೆ ಹಾಗೂ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರ ಮನವಿಯನ್ನು ತಿರಸ್ಕರಿಸುತ್ತಾರೆ. ಕಾನೂನು ಕ್ರಮಕ್ಕೆ ಮುಂದಾಗುವುದಿಲ್ಲ ಮತ್ತು ಕಾನೂನು ಮೀರಿ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಈ ನಡುವೆ ರಾಜ್ಯಪಾಲರ ನಡೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಈ ಪ್ರಶ್ನೆಯನ್ನು ರಾಜ್ಯಪಾಲರನ್ನೇ ಕೇಳಿ ಎಂದರು.
ರಾಜ್ಯಪಾಲರ ಶೋಕಾಸ್ ನೋಟಿಸ್ ಕುರಿತು ಮಾತನಾಡಿರುವ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣನವರು, ರಾಜ್ಯಪಾಲರ ಶೋಕಾಸ್ ನೋಟಿಸ್‌ಗೆ ಸಚಿವ ಸಂಪುಟ ಮತ್ತು ಸಿಎಂ ಸಮಗ್ರ, ದಾಖಲೆ ಸಮೇತ ಕಾರಣಗಳನ್ನು ನೀಡಿದ್ದಾರೆ. ಪ್ರಕರಣವನ್ನು ಸಿಬಿಐ ಅಥವಾ ಯಾವುದೇ ತನಿಖಾ ಸಂಸ್ಥೆಗೆ ಹಸ್ತಾಂತರಿಸುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ. ಸಿಎಂ ಸಾರ್ವಜನಿಕ ಸೇವಕರಾಗಿರುವುದರಿಂದ ಸೆಕ್ಷನ್ 17ಎ ಅಡಿಯಲ್ಲಿ ಮಂಜೂರಾತಿ ನೀಡಲು ಮಾತ್ರ ರಾಜ್ಯಪಾಲರಿಗೆ ಅಧಿಕಾರ ಇರುತ್ತದೆ ಎಂದು ಹೇಳಿದ್ದಾರೆ.
ಮಾಜಿ ಎಂಎಲ್‌ಸಿ ಮತ್ತು ಕೆಪಿಸಿಸಿ ಮಾಧ್ಯಮ ಮುಖ್ಯಸ್ಥ ರಮೇಶ್ ಬಾಬು ಮಾತನಾಡಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು 2011 ರಲ್ಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು, ಆಗಿನ ರಾಜ್ಯಪಾಲರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದರು. ನ್ಯಾಯಾಲಯವು ನವೆಂಬರ್ 24, 2015 ರಂದು ರಾಜ್ಯಪಾಲರ ಅನುಮತಿಯನ್ನು ರದ್ದುಗೊಳಿಸಿತ್ತು ಎಂದು ಹೇಳಿದ್ದಾರೆ.
ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಮಾತನಾಡಿ, ಲೋಕಸಭೆಯ ಅಧಿವೇಶನ ಮುಗಿದ ನಂತರ ರಾಜ್ಯಪಾಲರು ನಿರ್ಧಾರ ಕೈಗೊಳ್ಳುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಪ್ರಕರಣವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆಂದು ಮೈಸೂರಿನ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ಜಾರೆ.
Advertisement