ಹೊಸಪೇಟೆ: ಚೈನ್ ಲಿಂಕ್ ಕಟ್ಟಾಗಿ ಕೆಳಕ್ಕೆ ಬಿದ್ದಿರುವ ತುಂಗಭದ್ರಾ ಜಲಾಶಯದ ಗೇಟ್ ನಂ.19ಕ್ಕೆ ಹೊಸ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯ ಬುಧವಾರದಿಂದಲೇ ಆರಂಭವಾಗಲಿದ್ದು, ಆಗಸ್ಟ್.17ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಗಳಿವೆ.
ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೇಟ್ ನಂಬರ್ 17ರ ಸರಪಳಿ ತುಂಡರಿಸಿ ಕಳಚಿ ಬಿದ್ದಿರುವ ಸ್ಥಳವನ್ನು ವೀಕ್ಷಣೆ ಮಾಡಿದರು. ಬಳಿಕ ನೀರಾವರಿ ಅಧಿಕಾರಿಗಳಿಂದ ಘಟನೆಯ ಬಗ್ಗೆ ವಿವರಣೆ ಪಡೆದರು.
ನೀರಾವರಿ ಅಧಿಕಾರಿಗಳ ಜೊತೆ ಸುಮಾರು 15 ನಿಮಿಷಗಳ ಕಾಲ ಜಲಾಶಯದ ಸಂರಕ್ಷಣೆ, ನಿರ್ವಹಣೆ ಕುರಿತು ಚರ್ಚೆ ನಡೆಸಿದರು ಆಂಧ್ರಪ್ರದೇಶದ ನೀರಾವರಿ ಸಚಿವರು, ಜಲಾಶಯದ ವ್ಯಾಪ್ತಿಯ ರೈತ ಮುಖಂಡರ ಜೊತೆಗೂ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯುಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಇನ್ನು ಮುಂದೆ ಅಣೆಕಟ್ಟು ನಿರ್ವಹಣೆ ಕುರಿತು ತಜ್ಞರ ಸಲಹೆಗಳನ್ನು ಪಾಲಿಸಲಾಗುವುದು. ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ 12,000 ಕೋಟಿ ರೂ. ಡಿಪಿಆರ್ ಸಿದ್ಧವಾಗಿದ್ದು, ಶೀಘ್ರದಲ್ಲೇ ಆಂಧ್ರಪ್ರದೇಶ ಮತ್ತು ತೆಲಂಗಾಣ ಸಿಎಂಗಳೊಂದಿಗೆ ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.
ತುಂಗಭದ್ರಾ ಜಲಾಶಯ ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಆಗಮಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
Advertisement