
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಭೂ ಕಂಟಕ ಶುರುವಾಗಿದೆ. ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತರ ನಿಯೋಗ ರಾಜ್ಯಪಾಲರ ಮೊರೆ ಹೋಗಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ನಿರ್ಲಕ್ಷಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 116.16 ಎಕರೆ ಸರ್ಕಾರಿ ಭೂಮಿಯನ್ನು ಶೈಕ್ಷಣಿಕ ಸೊಸೈಟಿಗೆ ಮಂಜೂರು ಮಾಡಿದ್ದು, ಈ ಬಗ್ಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಬುಧವಾರ ರಾಜ್ಯಪಾಲರನ್ನು ಭೇಟಿಯಾಗಿ ಟಿ. ನರಸಿಂಹಮೂರ್ತಿ ಎಂಬವರು ಮನವಿ ಮಾಡಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಕೈಗಾರಿಕಾ ಉದ್ದೇಶಕ್ಕಾಗಿ ರೈತರಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿಯ 187 ಕೋಟಿ ಬೆಲೆ ನಿಗದಿಪಡಿಸಿತ್ತು. ಆದರೂ, ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರಕ್ಕೆ (CESS) 50 ಕೋಟಿ ರೂ.ಗೆ ಮಂಜೂರು ಮಾಡಲಾಗಿದೆ, ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ನಲ್ಲಿ ಈ ಭೂಮಿ ಇದೆ ಎಂದು ಹೇಳಿದ್ದಾರೆ.
ರಾಜ್ಯಪಾಲರ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ ಟಿ.ನರಸಿಂಹಮೂರ್ತಿ ಅವರು, CESS ಕಾರ್ಯದರ್ಶಿ ನಾಗರಾಜ ರೆಡ್ಡಿ ಅವರು ಮಾರ್ಚ್ 25, 2021 ರಂದು ಯಡಿಯೂರಪ್ಪ ಅವರನ್ನು ಸಂಪರ್ಕಿಸಿದ್ದು, ದೇವನಹಳ್ಳಿ ತಾಲೂಕಿನಲ್ಲಿ 116.16 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರು ಸಮಿತಿಯ ಶಿಫಾರಸ್ಸುಗಳಿಗೆ ವಿರುದ್ಧವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಹೀಗಾಗಿ ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡುವಂತೆ ರಾಜ್ಯಪಾಲರ ಮೊರೆ ಹೋಗಿದ್ದೇವೆ.
ಹೈಕೋರ್ಟ್ ಆದೇಶದಂತೆ ಪ್ರಾಸಿಕ್ಯೂಷನ್ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ರಾಜ್ಯಪಾಲರು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ, ಈಗಾಗಲೇ ಲೋಕಾಯುಕ್ತಕ್ಕೂ ದೂರು ನೀಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲೂ ಖಾಸಗಿ ದೂರು ದಾಖಲಾಗಿದೆ, ಇದೆಲ್ಲದರ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
Advertisement