
ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕೃಷ್ಣರಾಜ ಬುಲೆವಾರ್ಡ್ ರಸ್ತೆಯಲ್ಲಿರುವ ನ್ಯಾಯಾಲಯದ ಮುಂಭಾಗ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳು ರಾಜ್ಯಪಾಲರ ವಿರುದ್ಧ ಘೋಷಣೆಗಳ ಕೂಗಿ ಪ್ರತಿಭಟಿಸಿದರು. ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆ ಸ್ಥಳದಲ್ಲಿ ಮಾನವ ಸರಪಳಿ ರಚನೆ ಮಾಡಿ ಅಂಗಿ ಬಿಚ್ಚಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಮದ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ ಶಿವರಾಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
ತರೀಕೆರೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಬಗ್ಗೆ ವರದಿಯಾಗಿದೆ.
Advertisement