
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ.
ಈ ವಿಚಾರವಾಗಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ನಾನು ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯಪಾಲರ ನಿರ್ಧಾರಕ್ಕೆ ಯಾವುದೇ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡಬಾರದು. ರಾಜ್ಯಪಾಲರ ನಿರ್ಧಾರ ವಿರುದ್ಧ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಎಸ್ಓಪಿ ಪಾಲಿಸಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿದ್ದು ಬಿಜೆಪಿಗರು ಗ್ಯಾರಂಟಿಗಳ ವಿರುದ್ಧವಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಬಡವರ ಪರ ಕೆಲಸ ಮಾಡುತ್ತಿದ್ದೇವೆ. ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಬಡವರ ಪರ ಇದೆ ಎಂದು ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ರಾಜ್ಯಪಾಲರು ಈ ರೀತಿ ಮಾಡುತ್ತಾರೆಂದು ನಮಗೆ ಮೊದಲೇ ಗೊತ್ತಿತ್ತು. ಹೀಗಾಗಿ ನಾವು ಇನ್ನೂ ಗಟ್ಟಿಯಾಗುತ್ತಿದ್ದೇವೆ. ಇದರಿಂದ ಬಿಜೆಪಿ-ಜೆಡಿಎಸ್ನವರು ಬಯಲಿಗೆ ಬರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
Advertisement