ಕೋಲ್ಕತ್ತಾದ ವೈದ್ಯೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಅತ್ಯಾಚಾರ ಮತ್ತು ಕೊಲೆ ಮಾಡಿರುವಂತಹ ಘೋರ ಕೃತ್ಯ ದೇಶಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಅಲ್ಲದೆ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಎದ್ದಿದ್ದು ಇದರ ಬೆನ್ನಲ್ಲೆ ಬೆಂಗಳೂರಿನಲ್ಲೂ ಕಳೆದ ರಾತ್ರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ಯರಾಜ್ಯದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಸ್ನೇಹಿತರೊಂದಿಗೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗಲು ಯುವತಿ ಬೈಕ್ ನಲ್ಲಿ ಲಿಫ್ಟ್ ತೆಗೆದುಕೊಂಡಿದ್ದು ಆತನೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿನಿ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅತ್ಯಾಚಾರ ಪ್ರಕರಣ ಸಂಬಂಧ HSR Layout ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯ ಸುಳಿವು ಪತ್ತೆಯಾಗಿದೆ. ಆರೋಪಿಯ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಲರು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ಇಂದು ಕಾವೇರಿ ನಿವಾಸದಲ್ಲಿ ಕೆಲ ಆಪ್ತ ಸಚಿವರು, ವಕೀಲರು ಜತೆ ಸಮಾಲೋಚನೆ ನಡೆಸಿದ್ದು, ಅಂತಿಮವಾಗಿ ಹೈಕೋರ್ಟ್ ಮೆಟ್ಟಿಲೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ನಾಳೆ ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಹೈಕೋರ್ಟ್ ಅರ್ಜಿ ಸಲ್ಲಿಸಲಿದ್ದಾರೆ. ಕಾನೂನು ಹೋರಾಟದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ನಾಳಿನ ಮಂತ್ರಾಲಯ ಪ್ರವಾಸ ರದ್ದು ಮಾಡಿದ್ದಾರೆ. ಇನ್ನು ರಾಜ್ಯಪಾಲರು ನಡೆ ವಿರೋಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದ ಮಲವಳ್ಳಿಯಲ್ಲಿ ಪ್ರತಿಭಟನೆ ವೇಳೆ ಶಾಸಕ ಪಿಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳ ಅರ್ಜಿ ಕೊಡ್ತಾನೆ. ಆ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಝೀಕಾ ವೈರಸ್ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ ಜಾಕ್ ಮಂಜು ವಿರುದ್ಧ ಬೆಂಗಳೂರಿನ ಉಪ್ಪಾರ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೊರ್ಟ್ನ ಪಿಸಿಆರ್ ಆಧರಿಸಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಕನ್ನಡದ ಮತ್ತೋರ್ವ ನಿರ್ಮಾಪಕ ಶಿವಶಂಕರ್ ಎಂಬುವವರು ಮಂಜು ವಿರುದ್ಧ ದೂರು ದಾಖಲು ಮಾಡಿದ್ದರು. ಜಾಕ್ ಮಂಜು ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಜಾಕ್ ಮಂಜು ಜೊತೆ ಸಿದ್ದೇಶ್, ಮುರುಳಿ ಎಂಬುವವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಮತ್ತೊಂದೆಡೆ 'ಬ್ಯಾಚುಲರ್ ಪಾರ್ಟಿ' ಚಿತ್ರದಲ್ಲಿ 'ನ್ಯಾಯ ಎಲ್ಲದೆ' ಹಾಡನ್ನು ಅನಧಿಕೃತವಾಗಿ ಬಳಸಲಾಗಿದೆ ಎಂದು MRT Music ಕಂಪನಿ ಆರೋಪದ ಹಿನ್ನೆಲೆಯಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ನಟ-ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಆದೇಶಿಸಿದೆ.
ಗದಗದಲ್ಲಿ ಸರ್ಕಾರಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ, ಪತ್ನಿ ರಾಜೇಶ್ವರಿ, ಮಗಳು ಐಶ್ವರ್ಯ, ಮಗ ವಿಜಯ ಎಂದು ಗುರುತಿಸಲಾಗಿದೆ. ಶ್ರಾವಣ ಮಾಸದ ನಿಮಿತ್ತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
Advertisement