ಬೆಂಗಳೂರು: ಒಂದು ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ ಎಂಬ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ನೀಡಿರುವ ಹೇಳಿಕೆ, ಭಾರೀ ವಿವಾದಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಬಿಜೆಪಿ ಕನಸು ಈಡೇರದು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ ಎಂದು ಹೇಳಿದರು.
ಈ ಹೇಳಿಕೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿಟಿ ರಿವಿ ಅವರು ಮಾತನಾಡಿ, ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಬಿಚ್ಚಿಟ್ಟಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು? ರಾಜಭವನಕ್ಕೆ ಕಾಂಗ್ರೆಸ್ ಪುಢಾರಿಗಳನ್ನು ನುಗ್ಗಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಶಾಸಕರ ಈ ಹೇಳಿಕೆಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಿಸಲಿ. ಕೂಡಲೇ ರಾಜ್ಯ ಪೋಲಿಸ್ ಇಲಾಖೆಯ ಮಹಾನಿರ್ದೇಶಕರು, ಪರಿಷತ್ ಸದಸ್ಯರಾದ ಐವಾನ್ ಡಿಸೋಜ ಅವರ ವಿರುದ್ದ ದೂರುನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ರಾಜೀನಾಮೆ ಸನ್ನಿಹಿತವಾಗುತ್ತಿದ್ದಂತೆಯೇ ಗೌರವಾನ್ವಿತ ರಾಜ್ಯಪಾಲರ ಕಚೇರಿಯ ಮೇಲೆ ದಾಳಿ ಮಾಡುವ ಬೆದರಿಕೆಯನ್ನು ಕಾಂಗ್ರೆಸ್ ಹಾಕುತ್ತಿದೆ. ಈ ಮೂಲಕ ಕರ್ನಾಟಕದಲ್ಲಿ ಅರಾಜಕತೆ ಮತ್ತು ಅಸ್ಥಿರತೆಯನ್ನು ಉಂಟುಮಾಡಲು ಸಂಚು ಮಾಡುತ್ತಿದೆ. ಹಗರಣಗಳಿಂದಾಗಿ ತೀವ್ರ ಮುಜುಗರಕ್ಕೊಳಗಾದ ಮತ್ತು ಜನರಿಂದ ಮೂಲೆಗುಂಪಾಗಿರುವ ಕಾಂಗ್ರೆಸ್ ಈಗ ಕರ್ನಾಟಕದ ಪ್ರಗತಿಪರ ಮತ್ತು ಶಾಂತಿಯುತ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇಂತಹ ನೀಚ, ಕುತಂತ್ರಿ ಪಕ್ಷವನ್ನು ಜನರು ತಿರಸ್ಕರಿಸುತ್ತಾರೆಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ಸಂವಿಧಾನದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರು ಈಗ ಗೂಂಡಾಗಿರಿ ನಡೆಸುತ್ತಿದ್ದಾರೆ, ರಾಜ್ಯಪಾಲರ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜ್ಯಪಾಲರನ್ನು ಬೆದರಿಸುತ್ತಿದ್ದಾರೆ. ರಾಜ್ಯವು ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಸಾಕ್ಷಿಯಾಗಬಹುದು ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ನಾಯಕರು ತಮ್ಮ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ, ಹೀಗಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವಾನ್ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶವನ್ನು ಮಾದರಿ ರಾಜ್ಯಗಳೆಂದು ಪರಿಗಣಿಸುವ ಕಾಂಗ್ರೆಸ್, ಕರ್ನಾಟಕದ ಸ್ಥಿರತೆಗೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
ಐವನ್ ಡಿಸೋಜಾ ವಿರುದ್ಧ ಪ್ರತಿಭಟನೆ: ದೂರು ದಾಖಲು
ಈ ನಡುವೆ ಐವನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಐವನ್ ಡಿಸೋಜಾ ವಿರುದ್ಧ ಎಫ್.ಐ.ಆರ್ ದಾಖಲು ಮಾಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.
ಐವನ್ ಡಿಸೋಜಾ ವಿರುದ್ಧ ದೂರು ಅರ್ಜಿ ಸ್ವೀಕರಿಸಿದ ಬರ್ಕೆ ಠಾಣೆ ಪೊಲೀಸರು, ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ಬರೆದುಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದುಕೊಂಡರು.
Advertisement