ಬೆಂಗಳೂರು: ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರು ಮತ್ತು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಿಜೆಪಿ ಮಂಗಳವಾರ ಆಗ್ರಹಿಸಿದೆ.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗವು, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ಮಂಗಳವಾರ ದೂರು ಸಲ್ಲಿಸಿತು.
ದೂರಿನಲ್ಲಿ ರಾಜ್ಯಪಾಲರಿಗೆ ಬೆದರಿಕೆ ಮತ್ತು ನಿಂದನೆ ಮಾಡಿರುವ ಕಾಂಗ್ರೆಸ್ ಎಂಎಲ್ ಸಿ ಐವನ್ ಡಿಸೋಜಾ, ಸಚಿವರಾದ ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅವರ ಭಾವಚಿತ್ರಕ್ಕೆ ಪಾದರಕ್ಷೆಯಿಂದ ಹೊಡೆದು ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದಾರೆ. ಇದರಿಂದ ಸಂವಿಧಾನಕ್ಕೆ ಅಪಮಾನ ಮಾಡಿದಂತಾಗಿದೆ. ಆದರೂ ಪ್ರತಿಭಟನಾ ಸ್ಥಳದಲ್ಲಿದ್ದ ಪೊಲೀಸರು ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
ಕಾನೂನು ಪ್ರಕಾರ ಮುಖ್ಯಮಂತ್ರಿಯನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಸುಗ್ರೀವಾಜ್ಞೆ ಹೊರಡಿಸಿದ್ದಾರೆ, ಆದರೆ ಕಾಂಗ್ರೆಸ್ ನಾಯಕರು ವೈಯಕ್ತಿಕ ದಾಳಿಯಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 151 ರ ಪ್ರಕಾರ, ಯಾರಾದರೂ ಭಾರತದ ರಾಷ್ಟ್ರಪತಿ ಅಥವಾ ರಾಜ್ಯಪಾಲರನ್ನು ತಮ್ಮ ಕಾನೂನುಬದ್ಧ ಅಧಿಕಾರವನ್ನು ಚಲಾಯಿಸಲು ನಿರ್ಬಂಧಿಸಲು ಒತ್ತಾಯಿಸಿದರೆ ಅವರನ್ನು ಜೈಲು ಶಿಕ್ಷೆಗೆ ಗುರಿಯಾಗಿಸಬೇಕಾಗುತ್ತದೆ. ಈ ಶಿಕ್ಷೆ ಏಳು ವರ್ಷಗಳವರೆಗೆ ವಿಸ್ತರಿಸುವ ಅವಕಾಶವೂ ಇದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡುತ್ತಿದ್ದಾರೆ. ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಅವರು ಬಾಂಗ್ಲಾದೇಶದಂತೆ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರ ಕಚೇರಿಗೆ ನುಗ್ಗುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾದರೆ ರಾಜ್ಯಪಾಲರೇ ಹೊಣೆಯಾಗುತ್ತಾರೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡೂರಾವ್ ಅವರು ರಾಜ್ಯಪಾಲರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕು. ಪೊಲೀಸರು ಕಾಂಗ್ರೆಸ್ ಪ್ರತಿಭಟನೆಯನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಬಿಜೆಪಿ ಹೋರಾಟವನ್ನು ತೀವ್ರಗೊಳಿಸುತ್ತದೆ ಮತ್ತು ಇದಕ್ಕೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.
Advertisement