ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಿದ್ದು, ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಆಗ್ರಹಿಸಿ ರಾಷ್ಟ್ರಪತಿ ಭವನ ಪರೇಡ್ ನಡೆಸುವ ಸಲಹೆ ಬಗ್ಗೆಯೂ ಹೈಕಮಾಂಡ್ ಜೊತೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ. ಸಿಎಂ, ಡಿಸಿಎಂ ಜೊತೆ ಗೃಹ ಸಚಿವ ಡಾ.ಜಿ ಪರಮೇಶ್ವರ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಇದೇ ವೇಳೆ ಬಿಜೆಪಿ ಶಾಸಕರ ಮಾತು ಕೇಳಿ ರಾಜ್ಯಪಾಲರು 15 ಬಿಲ್ ಗಳನ್ನು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್ ರಾಜ್ಯಪಾಲರಿಗೆ ದೂರು ನೀಡಿದ್ದು ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ವಿಧಾನಪರಿಷತ್ನ ಬಿಜೆಪಿ ಸದಸ್ಯ ಅರುಣ್ ತಮ್ಮ ದೂರಿನ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, 2022-23ರ ಅವಧಿಯಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇತ್ತು. ಜಿಲ್ಲಾ ಮತ್ತು ತಾಲೂಕು ಪಂಚಾಯತ್ಗಳಲ್ಲಿ ಎಷ್ಟು ಹಣ ಬಳಕೆ ಆಗಿದೆ. ಉಳಿದ ಮೊತ್ತ ಯಾವುದಕ್ಕೆ ಉಪಯೋಗ ಮಾಡಿದೆ ಅಂತಾ ಪ್ರಶ್ನೆ ಮಾಡಿದ್ದೇನೆ. 1953 ಕೋಟಿ ರೂ. ಹಣ ಇತ್ತು, ಸಂಚಿತ ನಿಧಿಗೆ ಉಳಿದ ಹಣ ಹೋಗಬೇಕು. ಹಣ ಬಳಕೆ ಮಾಡಬೇಕಂದ್ರೆ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.
ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ 12, 690 ಕೋಟಿ ವೆಚ್ಚದಲ್ಲಿ 18 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಗುರುವಾರ ತಾತ್ವಿಕ ಒಪ್ಪಿಗೆ ನೀಡಿದೆ. ಟ್ವಿನ್-ಟ್ಯೂಬ್ ಮೋಡ್‌ನಲ್ಲಿ ಭೂಗತ ಸುರಂಗದ ಪ್ರಸ್ತಾಪವಾಗಿದೆ. ಇನ್ನು ಪ್ರವಾಸೋದ್ಯಮ ಬೆಳವಣಿಗೆ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣಕ್ಕೂ ಸಂಪುಟ ಒಪ್ಪಿಗೆ ನೀಡಿದೆ. ಸ್ಕೈ ಡೆಕ್ ನಿರ್ಮಾಣದ ಸ್ಥಳ ನಿಗದಿ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳಲಾಗಿಲ್ಲ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದು ರೇವಣ್ಣ ಕುಟುಂಬದ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣವಾಗಿದೆ. ಉಳಿದಂತೆ ಇನ್ನು ಎರಡು ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಬೇಕಿದೆ. ಸಂತ್ರಸ್ತ ಮಹಿಳೆಯು ತಂದೆ ಮಗ ಇಬ್ಬರ ವಿರುದ್ಧವೂ ದೂರು ನೀಡಿದ್ದರು. ಹೀಗಾಗಿ, ಒಂದೇ ಪ್ರಕರಣದಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಪ್ರತ್ಯೇಕ ಸೆಕ್ಷನ್ ಅಡಿ ಎಫ್‌ಐಆರ್ ದಾಖಲಾಗಿತ್ತು. 123 ಸಾಕ್ಷ್ಯಗಳನ್ನು ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿದೆ.
Advertisement