KSRTC ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಅಶೋಕ್ ರವರೇ ಎಂದು ಪ್ರಶ್ನಿಸಿದ್ದಾರೆ.
ಗೃಹ ಸಚಿವ ರಾಮಲಿಂಗಾ ರೆಡ್ಡಿ
ಗೃಹ ಸಚಿವ ರಾಮಲಿಂಗಾ ರೆಡ್ಡಿ
Updated on

ಬೆಂಗಳೂರು: ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ, ಜನತೆ ಸುಧಾರಿಸಿಕೊಳ್ಳುವ ಮೊದಲೇ ಇದೀಗ ಮತ್ತೊಂದು ಶಾಕ್ ನೀಡಿದೆ.

ಕೆಎಸ್ಆರ್'ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾ ರಡ್ಡಿಯವರು ಶನಿವಾರ ನೀಡಿದ್ದಾರೆ.

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (KTRC) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕೆಯ ವರದಿ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕರ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ. ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಮಲಿಗಾ ರೆಡ್ಡಿಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ, ಕೆಎಸ್ಆರ್'ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನೂ ನೀಡಿದ್ದಾರೆ.

ಗೃಹ ಸಚಿವ ರಾಮಲಿಂಗಾ ರೆಡ್ಡಿ
ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್

ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು. ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ? 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ? ಆಗ ಯಾಕೆ ವಿರೋಧ ವ್ಯಕ್ತಪಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

15/11/2021 ರಲ್ಲಿ ಎಂ.ಆರ್ ಶ್ರೀನಿವಾಸಮೂರ್ತಿ ಭಾಆಸೇ( ನಿವೃತ್ತ) ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿಜೆಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ? ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ?

ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ? ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ನಿಮ್ಮ ಮನಸ್ಥಿತಿಯೇ ತಿಳಿಯದಾಗಿದೆ. ಅಶೋಕ್ ಅವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com