ವಿನಾಯಕ ಚತುರ್ಥಿ: PoP ಗಣೇಶ ಮೂರ್ತಿಗಳ ಮೇಲೆ ಪಾಲಿಕೆ ಹದ್ದಿನ ಕಣ್ಣು; ಸಮಿತಿ ರಚನೆಗೆ ಆದೇಶ

ನಗರದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹತ್ವದ ಸಭೆ ನಡೆಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣೇಶ ಮೂರ್ತಿಗಳ ಮೇಲೆ ಈಗಾಗಲೇ ನಿಷೇಧ ಹೇರಲಾಗಿದ್ದು, ಇದೀಗ ಈ ನಿಷೇಧ ನಿಯಮವನ್ನು ಕಠಿಣ ರೀತಿಯಲ್ಲಿ ಜಾರಿಗೆ ತರಲು ಸಮಿತಿ ರಚಿಸುವಂತೆ ಆದೇಶ ಹೊರಡಿಸಲಾಗಿದೆ.

ನಿಷೇಧವನ್ನು ಜಾರಿಗೆ ತರಲು ತಹಶೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಅವರನ್ನೊಳಗೊಂಡ ಸಮಿತಿ ರಚಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎನ್.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎನ್.ದಯಾನಂದ್ ಅವರೂ ಭಾಗಿಯಾಗಿದ್ದರು. ಸಭೆಯಲ್ಲಿ ಗಣೇಶ ಹಬ್ಬದ ಸಿದ್ಧತೆ ಕುರಿತು ಚರ್ಚಿಸಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೆಂಡಾಲ್ ಮತ್ತು ಮೆರವಣಿಗೆಗಳಿಗೆ ಅನುಮತಿ ನೀಡಲು ಬಿಬಿಎಂಪಿ ಈಗಾಗಲೇ ವಲಯ ಮಟ್ಟದಲ್ಲಿ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದೆ. ನಿನ್ನೆ ನಡೆದ ಸಭೆಯಲ್ಲಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು, ಜಲಮೂಲಗಳು ಕಲುಷಿತವಾಗದಂತೆ ನೋಡಿಕೊಳ್ಳಲು ಮತ್ತು ಪಿಒಪಿ ಗಣೇಶ ಮೂರ್ತಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಚರ್ಚಿಸಲಾಗಿದೆ.

ಇದಕ್ಕಾಗಿ ತಂಡಗಳನ್ನು ನಿಯೋಜನೆಗೊಳಿಸಲಾಗಿದ್ದು, ಈ ತಂಡಗಳು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಕೆಲವು ವಿಗ್ರಹಗಳನ್ನು ವಶಪಡಿಸಿಕೊಂಡಿವೆ ಎಂದು ದಯಾನಂದ್ ಅವರು ಹೇಳಿದ್ದಾರೆ.

ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೇ ನಿರ್ಬಂಧವಿರುವುದಿಲ್ಲ. 24 ಗಂಟೆಯೊಳಗಾಗಿ ಅನುಮತಿ ನೀಡಲು ಆಯಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ಧತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೇ ತೆರೆದು, ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ ಬಳಿಕ ಅಧಿಕಾರಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಅನುಮತಿ ಕೋರಿ ಬರುವವರಿಗೆ ಕಾಲಮಿತಿಯೊಳಗಾಗಿ ಅನುಮತಿ ಸಿಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈಗಾಗಲೇ ಪಿಒಪಿ ಗಣೇಶಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಬಾರಿ 5 ಅಡಿ ಗಣೇಶ ಮೂರ್ತಿಗಷ್ಟೇ ಅನುಮತಿ ಕೊಡಲಾಗಿತ್ತು. ಈ ಬಾರಿ ಬೆಂಗಳೂರಲ್ಲಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಗಣೇಶನ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗಣೇಶ ವಿಸರ್ಜನೆ ಮಾಡುವ 42 ಕೆರೆ, ಕಲ್ಯಾಣಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು. ಕಲ್ಯಾಣಿ ಬಳಿ ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನ ನಿಲುಗಡೆಗೆ ಸೂಚಿಸಿದ್ದು, ಬೆಂಗಳೂರು ನಗರದ ಮನೆ ಮನೆ ಗಣಪನ ವಿಸರ್ಜನೆಗೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಸಂಪೂರ್ಣ ಸ್ವಚ್ಛತೆ ಮಾಡಬೇಕು. ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡುವುದರ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್​ಗಳ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.

ಸಂಗ್ರಹ ಚಿತ್ರ
ಪಿಒಪಿ ಗಣೇಶನ ಮಾರಾಟ ಮಾಡಿದ್ರೆ ಹುಷಾರ್: ಸಚಿವ ಈಶ್ವರ್‌ ಖಂಡ್ರೆ ಖಡಕ್ ಎಚ್ಚರಿಕೆ

ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಬೆಸ್ಕಾಂ ಅಧಿಕಾರಿ, ಸಿಬ್ಬಂದಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳನ್ನು ಪರಿಶೀಲಿಸಿ. ಎಲ್ಲಿಯೂ ಯಾವುದೇ ರೀತಿಯ ಅನಾಹುತಗಳಾಗಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಬದಿಯ ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಯಾಗಿರುವಂತೆ ಪಾಲಿಕೆ ವಿದ್ಯುತ್ ವಿಭಾಗದ ಅಧಿಕಾರಿಗಳು ನೋಡಿಕೊಳ್ಳಬೇಕು. ಮೆರವಣಿಗೆ ಸಾಗುವ ರಸ್ತೆಗಳಲ್ಲಿ ರಸ್ತೆ ಹಾಳಾಗಿದ್ದಲ್ಲಿ ಅಥವಾ ರಸ್ತೆ ಗುಂಡಿಗಳು ಬಿದ್ದಿದ್ದಲ್ಲಿ ಸ್ಥಳ ಪರಿಶೀಲಿಸಿ ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಕೆರೆಗಳ ಬಳಿಯಿರುವ ಕಲ್ಯಾಣಿಗಳ ಬಳಿ ಗಣೇಶ ವಿಸರ್ಜನೆ ಮಾಡುವ ವೇಳೆ ಇಲಾಖಾ ವಾರು ನಿಯೋಜನೆ ಮಾಡಿರುವ ಸಿಬ್ಬಂದಿಗೆ ಡ್ರೆಸ್ ಕೋಡ್ ನೀಡಬೇಕು. ಜತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಪೊಲೀಸ್ ಇಲಾಖೆಯಿಂದ ಹೋಮ್ ಗಾರ್ಡ್‌ಗಳನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಮನೆಗಳಲ್ಲಿ ಪ್ರತಿಷ್ಠಾಪನೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಆಯಾ ವಲಯಗಳ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಬೇಕು ಎಂದರು.

ಪಿಓಪಿ ತಯಾರಿಕಾ ಘಟಕಗಳ ಪರಿಶೀಲನೆ ನಡೆಸಿ ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಅನುವು ಮಾಡಿಕೊಡಬೇಕು. ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆಯನ್ನು ನಿಷೇಧಿಸಲಾಗಿದ್ದು, ಗಣೇಶ ಮೂರ್ತಿ ತಯಾರಿಕಾ ಘಟಕಗಳಿಗೆ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದಲ್ಲಿ ಅವುಗಳನ್ನು ಸೀಜ್ ಮಾಡಿ, ಅಂತಹವರ ಮೇಲೆ ದಂಡ ವಿಧಿಸುವುದರ ಜೊತೆಗೆ ಕಾನೂನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com