
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವಂತೆಯೇ ಅಹಿಂದ ಸ್ವಾಮೀಜಿಗಳು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ.
ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು,ಅವರಿಗೆ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ್ದು, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿಗಳ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿರುವುದಾಗಿ ತಿಳಿಸಿದ್ದಾರೆ.
ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ, ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಮತ್ತಿತರ ಮಠದ ಸ್ವಾಮೀಜಿಗಳು ಈ ನಿಯೋಗದಲ್ಲಿದ್ದರು.
Advertisement