ಬೆಂಗಳೂರು: ಬಿಬಿಎಂಪಿಯಿಂದ ವಿಜಯನಗರದ ಬಸ್, ಮೆಟ್ರೊ ನಿಲ್ದಾಣದ ಬಳಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ನಿರ್ಮಿಸಿರುವ ಹವಾನಿಯಂತ್ರಿತ ಮಾರುಕಟ್ಟೆ "ಕೃಷ್ಣದೇವರಾಯ ಪಾಲಿಕೆ ಬಜಾರ್'' ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸಲಾಗಿದ್ದು, ಇಲ್ಲಿ 79 ಮಳಿಗೆಗಳಿವೆ. ದಕ್ಷಿಣ ಭಾರತದಲ್ಲಿಯೇ ಇಂತಹ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿತವಾಗಿರುವುದು ಇದೇ ಮೊದಲು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಅವರಿಗೆ ಗೌರವ ಸೂಚಿಸುವಂತೆ ಬಜಾರ್ ನ್ನು ಕೃಷ್ಣದೇವರಾಯ ಪಾಲಿಕೆ ಬಜಾರ್ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.
ಪಾಲಿಕೆ ಬಜಾರ್ ಸರ್ಕಾರದ ಜನಪರ ಚಿಂತನೆಯ ಯೋಜನೆ. ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇಂತಹ ಬಜಾರ್ ಗಳು ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ವಿಶೇಷವಾಗಿ ಗಾಂಧಿಬಜಾರ್ ನಂತಹ ಜನನಿಬಿಡ ಪ್ರದೇಶಗಳಲ್ಲಿ ನಿರ್ಮಿಸುವ ಅಗತ್ಯವಿದೆ ಎಂದರು.
ಕೃಷ್ಣದೇವರಾಯ ಪಾಲಿಕೆ ಬಜಾರ್ ಯೋಜನೆ ಶಾಸಕ ಎಂ ಕೃಷ್ಣಪ್ಪ ಅವರ ಕನಸು.ಇಲ್ಲಿನ ಬೀದಿವ್ಯಾಪಾರಿಗಳು ಬಿಸಿಲು, ಗಾಳಿ, ಮಳೆಯಲ್ಲಿ ವ್ಯಾಪಾರ ಮಾಡಬೇಕಾಗಿದ್ದು, ಅವರಿಗೆ ವ್ಯಾಪಾರ ಮಾಡಲು ಸ್ಥಳಾವಕಾಶ ಮಾಡಿಕೊಡಲು ಬೇಡಿಕೆಯಿರಿಸಿದ್ದರು. ನಾನು 2017 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ , ಪಾಲಿಕೆ ಬಜಾರ್ ಗಳ ನಿರ್ಮಾಣಕ್ಕೆ 5 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಿದ್ದೆ, ಇಂದು ನಾನೇ ಈ ಬಜಾರ್ ನ್ನು ಉದ್ಘಾಟಿಸುತ್ತಿರುವುದು ಸಂತೋಷ ತಂದಿದೆ.
ಬೆಂಗಳೂರು ನಗರ ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಬಸ್ ನಿಲ್ದಾಣ ಹಾಗೂ ಮೆಟ್ರೋ ರೈಲು ನಿಲ್ದಾಣವಿರುವ ಸೂಕ್ತ ಸ್ಥಳದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದೆ. ಇದರಿಂದ ಬಹಳ ಜನರಿಗೆ ಅನುಕೂಲವಾಗಲಿದೆ. ಒಂದೇ ಕಡೆ ಎಲ್ಲಾ ವ್ಯಾಪಾರ ಮಾಡುವವರಿಗೆ ವ್ಯವಸ್ಥೆ ಕಲ್ಪಿಸಿದ್ದು, ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ನುಡಿದರು.
ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ಯಾವ ಕಾರಣಕ್ಕೂ ಕೂಡ ಐದು ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.
ಅಭಿವೃದ್ಧಿ ಯೋಜನೆಗಳಿಗೆ 1 ಲಕ್ಷದ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಜೂರು ಮಾಡಿದ್ದೇವೆ. ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಬ್ರಾಂಡ್ ಬೆಂಗಳೂರು ಮಾಡುವುದು ನಮ್ಮ ಉದ್ದೇಶ. ಆ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
Advertisement