Land slide: Western Ghats ನಲ್ಲಿನ ಅಕ್ರಮ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

ಅರಣ್ಯ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಈ ಸಂಬಂದ ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Anti-encroachment drive in Western Ghats
ಪಶ್ಚಿಮ ಘಟ್ಟ ಅಕ್ರಮ ತೆರವು ಕಾರ್ಯಾಚರಣೆ
Updated on

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವಿಗೆ ಮುಂದಾಗಿದೆ.

ಹೌದು.. ಅರಣ್ಯ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಈ ಸಂಬಂದ ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

Anti-encroachment drive in Western Ghats
ಆನೆಗಳ ಸಮಸ್ಯೆ: ವನ್ಯಜೀವಿ- ಮಾನವ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಹೊಸ ಪರಿಹಾರಕ್ಕೆ ಪಶ್ಚಿಮ ಘಟ್ಟ ರಾಜ್ಯಗಳ ಒತ್ತಾಯ

ಪತ್ರದಲ್ಲೇನಿದೆ?

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಅಂತೆಯೇ 2015ರ ನಂತರದಲ್ಲಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಗಮನ ಹರಿಸಿ ಪರಿಶೀಲಿಸಿ ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸಲು ನೀಡಿರುವ ನಿರ್ದೇಶನಗಳನ್ನು ಪುನರುಚ್ಚರಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ತೆರವಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗಸ್ಟ್‌ 2ರಂದು ಸೂಚಿಸಿದ್ದರು.

Anti-encroachment drive in Western Ghats
ಶಿರೂರು ಭೂಕುಸಿತ: ಭಾರತೀಯ ನೌಕಾಪಡೆ ಕಾರ್ಯಾಚರಣೆ ಪುನಾರಂಭ; ಅಪಾರ ಪ್ರಮಾಣದ ಭಗ್ನಾವಶೇಷ ಪತ್ತೆ!

ಸಚಿವರು ಏನು ಹೇಳಿದ್ದರು?

“ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿವೆ. ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು” ಎಂದು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದರು.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತವಾಗಿ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com