
ಕಲಬುರಗಿ: ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಸಕ್ಕರೆ ಕಾರ್ಖಾನೆ ಮಾಲೀಕರೂ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಧರಣಿ ನಡೆಸಿದ್ದಾರೆ.
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕೋರ್ಟ್ ಆದೇಶ ನೀಡಿದರೂ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಗೆ ಕ್ರಮ ವಹಿಸದ ನಿರ್ಧಾರವನ್ನು ಬಸನಗೌಡ ಪಾಟೀಲ್ ಖಂಡಿಸಿದ್ದಾರೆ. ಮಂಗಳವಾರ ರಾತ್ರಿಯಿಂದಲೂ ಯತ್ನಾಳ್ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಬಿಟ್ಟು ತೆರಳದೇ ಧರಣಿ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆ ಲೈಸನ್ಸ್ ನವೀಕರಣ ಆಗಿಲ್ಲ ಮತ್ತು ಎಥೆನಾಲ್ ಉತ್ಪಾದನೆ ವಿಚಾರದಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ಕಾರಣ ನೀಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆ ಮುಚ್ಚುವಂತೆ ನೋಟಿಸ್ ನೀಡಿ, ಬಂದ್ ಮಾಡಿಸಿತ್ತು. ಮಂಡಳಿಯ ನಿರ್ಧಾರದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದ ಯತ್ನಾಳ್, ಕಾನೂನು ಸಮರ ನಡೆಸಿದ್ದರು.
ಕೆಲವು ದಿನಗಳ ಹಿಂದೆ ಕಾರ್ಖಾನೆ ತೆರೆಯಲು ಆದೇಶ ನೀಡಿದ್ದ ಹೈಕೋರ್ಟ್, ಯತ್ನಾಳ್ ಪರ ತೀರ್ಪು ನೀಡಿತ್ತು.
ತಮ್ಮ ಧರಣಿಗೆ ವಿಪಕ್ಷ ನಾಯಕ ಆರ್ ಅಶೋಕ್ ಯತ್ನಾಳ್ ಧರಣಿಗೆ ಬೆಂಬಲ ಸೂಚಿಸಿದ್ದಾರೆ. ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿಕೊಂಡು ಕೂತಿದ್ದಾರೆ. ಒಂದು ಕಡೆ ಮುಡಾ ಹಗರಣ, ಮತ್ತೊಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಇನ್ನೊಂದು ಖರ್ಗೆ ಹಗರಣ ನಡೆದಿದೆ. ಇಂತಹ ಸ್ಥಿತಿಯಲ್ಲಿ ಸ್ವಾಯತ್ತ ಸಂಸ್ಥೆಯ ಮೇಲೆ ಈ ಕೆಟ್ಟ ಸರ್ಕಾರ ಒತ್ತಡ ಹೇರಿದೆ. ಹಿಂದುಳಿದ ಪ್ರದೇಶವಾದ ಕಲಬುರ್ಗಿಯಲ್ಲಿ ಮುಳುಗಿಹೋಗಿದ್ದ ಸಕ್ಕರೆ ಕಾರ್ಖಾನೆಯನ್ನು ಶಾಸಕ ಯತ್ನಾಳ್ ಅಭಿವೃದ್ಧಿಪಡಿಸಿದ್ದಾರೆ. ಈ ಕಾರ್ಖಾನೆಯಿಂದ ಎರಡು ಸಾವಿರ ಜನರಿಗೆ ಉದ್ಯೋಗ ದೊರೆತಿದೆ, ಸಾವಿರಾರು ರೈತರಿಗೆ ಲಾಭವಾಗುತ್ತಿದೆ. ಆದರೆ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಹೈಕೋರ್ಟ್ ಆದೇಶವಿದ್ದರೂ ಕಾರ್ಖಾನೆ ಮರು ಆರಂಭಕ್ಕೆ ಅನುಮತಿ ನೀಡುತ್ತಿಲ್ಲ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ನಾವೆಲ್ಲರೂ ಅವರ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದೇವೆ. ಇದು ಸ್ವಾಯತ್ತ ಸಂಸ್ಥೆಯಾಗಿದ್ದರೂ, ಇಲ್ಲಿ ಸ್ವಾತಂತ್ರ್ಯ ಕಾಣುತ್ತಿಲ್ಲ. ಅಧಿಕಾರಿಗಳು ಪ್ರತಿಯೊಂದಕ್ಕೂ ಸಚಿವರ ಕಡೆ ನೋಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ ಎಂದು ಅಶೋಕ್ ದೂರಿದ್ದಾರೆ.
Advertisement