
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ನೀಡಿರುವ ಅನುಮತಿ ವಿರುದ್ಧ ಮಂಗಳವಾರ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿ, ಬಿಜೆಪಿಯ ಮಾಜಿ ಸಚಿವರಾದ ಜನಾರ್ಧನ ರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಲು ರಾಜ್ಯಪಾಲರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿದ್ದರೂ ಆತುರಾತುರವಾಗಿ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿದೆ. ಇದನ್ನು ಖಂಡಿಸುತ್ತೇವೆಂದು ಪ್ರತಿಭಟನಾಕಾರರು ಹೇಳಿದರು.
ರಾಜ್ಯಪಾಲರ ಈ ಕ್ರಮವು ಸಾಂವಿಧಾನಿಕ ತತ್ವಗಳು ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳನ್ನು ಉಲ್ಲಂಘಿಸಿದಂತಾಗಿದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ದುರ್ಬಲಗೊಳಿಸಲು ರಾಜ್ಯಪಾಲರು ರಾಜಕೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯಪಾಲರು ರಾಜಭವನವನ್ನು ಬಿಜೆಪಿ ಮತ್ತು ಜೆಡಿಎಸ್ ಕಚೇರಿಯನ್ನಾಗಿ ಮಾಡಿದ್ದಾರೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರ ಕ್ರಮಗಳು ಸಿಎಂ ವಿರುದ್ಧದ ಪಿತೂರಿಯಾಗಿದೆ.
ಕೂಡಲೇ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆಯಬೇಕು, ರಾಜ್ಯಪಾಲರನ್ನು ರಾಜ್ಯದಿಂದ ವಾಪಸ್ ಕರೆಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಸಮ್ಮತವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಗೌರವಿಸಬೇಕು. ರಾಜ್ಯದ ರಾಜಕೀಯ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಲು ಇಬ್ಬರು ನಾಯಕರು ರಾಜ್ಯಪಾಲರ ಕಚೇರಿಯನ್ನು ಬಳಸುವುದನ್ನು ನಿಲ್ಲಿಸಬೇಕು. ನಮಗೆ ನ್ಯಾಯ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಸಂವಿಧಾನ, ಸಹಬಾಳ್ವೆ ಮತ್ತು ಸ್ವಾಭಿಮಾನದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರು ಹೇಳಿದರು.
ಈ ನಡುವೆ ಪ್ರತಿಭಟನಾಕಾರರು ಸ್ವಲ್ಪ ದೂರದವರೆಗೆ ಮೆರವಣಿಗೆ ನಡೆಸಿದರು. ಬಳಿಕ ಪೊಲೀಸರು ಫ್ರೀಡಂ ಪಾರ್ಕ್‌ಗೆ ವಾಪಸ್ ಕಳುಹಿಸಿದರು.
ಒಕ್ಕೂಟದ ಅಧ್ಯಕ್ಷ ರಾಮಚಂದ್ರ, ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮಾವಳ್ಳಿ ಶಂಕರ್, ಎಂಎಲ್ಸಿ ನಾಗರಾಜ್ ಯಾದವ್, ಮಾಜಿ ಮೇಯರ್ ಗಳಾದ ಜೆ.ಹುಚ್ಚಪ್ಪ, ಮಂಜುನಾಥ್ ರೆಡ್ಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಮಾಜಿ ಉಪಮೇಯರ್ ಎಲ್.ಶ್ರೀನಿವಾಸ್, ಮಾಜಿ ಕಾಂಗ್ರೆಸ್ ಮುಖಂಡರಾದ ಎಂ.ಶಿವರಾಜು, ಉದಯಶಂಕರ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Advertisement