ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ಅಪಹರಣ ಮಾಡಿರುವ ಆರೋಪ ಕೇಳಿ ಬಂದಿದೆ. ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂಚಾಯತಿ ಚುನಾವಣೆ ನಡೆಯಲಿದೆ. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾಗಿದ್ದು, ಪಟ್ಟಣದ ಚೌಕಿಮಠದ ಬಳಿ ಸದಸ್ಯ ನಾಗರಾಜ ನಿಂತಿದ್ದಾಗ ಸ್ಕಾರ್ಪಿಯೋ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಅಪಹರಣ ಮಾಡಿದ್ದಾರೆ ಅವರ ತಂದೆ ಬಸವರಾಜ್ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯ ಪತ್ತೆಗೆ ಮೂರು ತಂಡಗಳನ್ನು ರಚಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಾವತಿಯ ರಸ್ತೆಗಳ ಮಧ್ಯಭಾಗದಲ್ಲಿ ಅಳವಡಿಸಲಾಗಿದ್ದ ಧಾರ್ಮಿಕ ಚಿಹ್ನೆಯುಳ್ಳ ವಿದ್ಯುತ್ ದೀಪಗಳ ಕಂಬ ತೆರವಿಗೆ ನೀಡಿದ್ದ ಆದೇಶಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ರದ್ದುಪಡಿಸಲಾಗಿದೆ. ನಗರ ಪಾಲಿಕೆ ವ್ಯಾಪ್ತಿಯ ಜಾಗದಲ್ಲಿ ಅಳವಡಿಸಲಾಗಿರುವ ವಿದ್ಯುತ್ ಕಂಬಗಳ ಕುರಿತು ನಗರಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ. ಈ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತ ಎಸ್'ಡಿಪಿಐ ತಹಸೀಲ್ದಾರರಿಗೆ ಮನವಿ ಮಾಡಿತ್ತು.
ಓಮಾನ್ ದೇಶದ ಹೈಮಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಅವರಿದ್ದ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಮೂಲಕ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
ಆರೋಗ್ಯ ಆಯುಕ್ತ ರಂದೀಪ್ ಡಿ ಸೇರಿ ಪ್ರಮುಖ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. 2004ರ ಕರ್ನಾಟಕ ಕೆಡರ್‌ನ ಐಎಎಸ್ ಅಧಿಕಾರಿ ಸತ್ಯವತಿ ಜಿ. ಅವರನ್ನು ಬೆಂಗಳೂರಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಈ ಇಲಾಖೆಯಲ್ಲಿದ್ದ ಐಎಎಸ್ ಅಧಿಕಾರಿ ಎನ್. ಮಂಜುನಾಥ ಪ್ರಸಾದ್ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಮಿಷನರ್ ಆಗಿದ್ದ ಶಿವಕುಮಾರ್ ಕೆಬಿ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಇಲಾಖೆಯ ಕಮಿಷನರ್ ಆಗಿ ನಿಯೋಜಿಸಲಾಗಿದೆ. ಬಿಎಂಟಿಸಿಯ ಭದ್ರತೆ ಮತ್ತು ವಿಜಿಲೆನ್ಸ್ ನಿರ್ದೇಶಕರಾಗಿದ್ದ ಅರ್ಚನಾ ಎಂಎಸ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬಿಬಿಎಂಪಿಯ ಪಶ್ಚಿಮ ವಲಯದ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ. ಬೆಂಗಳೂರು ಜಲ ಮಂಡಳಿ ಅಧ್ಯಕ್ಷರಾಗಿದ್ದ ಡಾ ರಾಮ್ ಪ್ರಸಾತ್ ಮನೋಹರ್ ವಿ ಅವರನ್ನು ಬೆಂಗಳೂರಿನ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.
ಜಲಸಂಪನ್ಮೂಲ ಇಲಾಖೆಗೆ ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದ 37 ಅನರ್ಹ ಅಭ್ಯರ್ಥಿಗಳು, ಮೂವರು ಸರ್ಕಾರಿ ನೌಕರರು, 11 ಮಂದಿ ಮಧ್ಯವರ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 40 ಲಕ್ಷ ಬೆಲೆಯ 2 ಕಾರುಗಳು, 17 ಮೊಬೈಲ್‌ಗಳು, ಹಾರ್ಡ್ ಡಿಸ್ಕ್‌ನ್ನು ವಶಪಡಿಸಿಕೊಂಡಿದ್ದಾರೆ. ಈ ಮಧ್ಯವರ್ತಿಗಳ ಪೈಕಿ 3 ಆರೋಪಿತರು ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರಾಗಿದ್ದಾರೆ. ಜಲಸಂಪನೂಲ ಇಲಾಖೆಯಿಂದ 2022ನೇ ಸಾಲಿನ ಅಕ್ಟೋಬರ್ ತಿಂಗಳಿನಲ್ಲಿ ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲಾಗ್ ಹುದ್ದೆಗಳಿಗೆ ನೇರ ನೇಮಕಾತಿಯಡಿ ಆನ್‌ಲೈನ್ ಮೂಲಕ 182 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲಾಗಿತ್ತು.
ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ. ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಬಿಎಸ್ ವೈ ಅವರನ್ನು ಬಂಧಿಸದಂತೆ ಆದೇಶ ಹೊರಡಿಸಿತ್ತು. ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.
Advertisement