Fengal cyclone: ಕರ್ನಾಟಕದಲ್ಲೂ ಚಂಡಮಾರುತ ಎಫೆಕ್ಟ್, ಬೆಂಗಳೂರು ಸೇರಿ ಹಲವೆಡೆ ಮಳೆ! ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ನೆರೆಯ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆ ಆರ್ಭಟ ಜೋರಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ (Fengal Cyclone) ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಫೆಂಗಲ್ ಚಂಡಮಾರುತ ಶನಿವಾರ ಸಂಜೆ ವೇಳೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದ್ದು, ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ನಗರಗಳು ಹಾಗೂ ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಕರ್ನಾಟಕದಲ್ಲೂ ಚಂಡಮಾರುತ ಪರಿಣಾಮ ಮಳೆಯಾಗುತ್ತಿದ್ದು, ಕರ್ನಾಟಕದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಶನಿವಾರದಿಂದಲೇ ಬದಲಾದ ವಾತಾವರಣ ರಾಜ್ಯದ ಜಿಲ್ಲೆಗಳ ಜನರನ್ನು ಕಾಡತೊಡಗಿದ್ದು, ಚಂಡಮಾರುತದ ಎಫೆಕ್ಟ್ ಮುಂದಿನ ಮೂರ್ನಾಲ್ಕು ದಿನ ರಾಜ್ಯ ರಾಜಧಾನಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವೆಡೆ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆ
ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ರಾತ್ರಿಯಿಂದ ಮಳೆಯಾಗುತ್ತಿದ್ದು, ಬೆಂಗಳೂರು ಮಾತ್ರವಲ್ಲದೇ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ