ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹೊಂಡದಲ್ಲಿ ನೀರು ತುಂಬಿ ಕೂಳೂರು ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉಡುಪಿಯಿಂದ ಮಂಗಳೂರಿಗೆ ಬರುವ ವಾಹನ ಸವಾರರು ಪರದಾಡುವಂತಾಗಿದೆ. ಹೆದ್ದಾರಿ ಬದಿ ಗೇಲ್ ಗ್ಯಾಸ್ ಕಂಪನಿ ರಸ್ತೆ ಅಗೆದಿದ್ದರಿಂದ ಆ ಗುಂಡಿಯಲ್ಲಿ ನೀರು ಶೇಖರಣೆಗೊಂಡಿದ್ದು, ಬೈಕ್, ಕಾರು, ಲಾರಿಗಳು ಸಂಚರಿಸುತ್ತಿರುವಾಗಲೇ ರಸ್ತೆ ಕುಸಿದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಚಂಡಮಾರುತದ ಪರಿಣಾಮ ಮುಂದಿನ 24 ಗಂಟೆಗಳ ಕಾಲ, ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗಲಿದ್ದು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು IMD ಮುನ್ಸೂಚನೆ ನೀಡಿದೆ.
ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದ ನಂತರವೂ ಬಸನಗೌಡ ಪಾಟೀಲ್ ಯತ್ನಾಳ್, ಕೆಲವು ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಿದ್ದಾರೆ. ವಕ್ಫ್ ವಿರುದ್ಧ ಕರ್ನಾಟಕದಲ್ಲಿ ಪ್ರತ್ಯೇಕ ಅಭಿಯಾನ ನಡೆಸಿ ವಕ್ಫ್‌ಗೆ ಸಂಬಂಧಿಸಿದಂತೆ ರಚಿಸಲಾಗಿರುವ ಸಂಸದೀಯ ಸಮಿತಿಯ ಅಧ್ಯಕ್ಷರಾದ ಜಗದಾಂಬಿಕ ಪಾಲ್ ರವರನ್ನು ಭೇಟಿ ಮಾಡಿ ವರದಿ ನೀಡಲು ದೆಹಲಿಗೆ ತೆರಳಿರುವ ಬಿಜೆಪಿಯ ನಾಯಕರು ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದಾರೆ. ಇನ್ನು ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಎದುರಾಗಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಚುಗ್ ಅವರನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.
ಹಾಸನದಲ್ಲಿ ಡಿಸೆಂಬರ್ 5 ರಂದು ಕಾಂಗ್ರೆಸ್ ಆಯೋಜಿಸಿರುವ ಸಮಾವೇಶದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ಎಂದು ಹೆಸರಿಡಲಾಗಿತ್ತು. ಇದೀಗ ಜನ ಕಲ್ಯಾಣ ಸಮಾವೇಶ ಎಂದು ಹೆಸರಿಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ಪಕ್ಷದ ಬ್ಯಾನರ್ ಹಾಗೂ ತಮ್ಮ ನಾಯಕತ್ವದಲ್ಲಿಯೇ ಸಮಾವೇಶ ನಡೆಯಲಿದೆ. ಇದು ಕಾಂಗ್ರೆಸ್ ಕಾರ್ಯಕ್ರಮವಾಗಿದ್ದು, ಪಕ್ಷ ಹಾಗೂ ನನ್ನ ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಮಾವೇಶವನ್ನು ಆರಂಭದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನವಾಗಿ ಆಯೋಜಿಸಲು ಸಿದ್ಧತೆ ನಡೆಸಲಾಗಿತ್ತು. ಇದಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿತ್ತು.
ಬಳ್ಳಾರಿ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿಗೆ ಕಳಪೆ ಗುಣಮಟ್ಟದ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವರದಿಗಳ ನಡುವೆ, ಪಶ್ಚಿಮ ಬಂಗಾಳ ಮೂಲದ ತಯಾರಕ ಕಂಪನಿ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ (ಡಿಸಿಜಿಐ) ಮನವಿ ಮಾಡಿದೆ. ಕರ್ನಾಟಕ ಆರೋಗ್ಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಡಿಸಿಜಿಐ ಗೆ ಪತ್ರ ಬರೆದಿದ್ದು, ಕಳಪೆ ಗುಣಮಟ್ಟದ ಐವಿ ಪೂರೈಸಿದ್ದ ಔಷಧ ತಯಾರಕರು ಪಶ್ಚಿಮ ಬಂಗಾಳದ ಡ್ರಗ್ಸ್ ಕಂಟ್ರೋಲರ್/ಲೈಸೆನ್ಸಿಂಗ್ ಪ್ರಾಧಿಕಾರದಿಂದ ಪರವಾನಗಿ ಪಡೆದಿದ್ದಾರೆ ಇದನ್ನು DCGI ಅನುಮೋದಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಒದಗಿಸಿದ ಮಾಹಿತಿಯೊಂದಿಗೆ ತಯಾರಕರು ಮತ್ತು ಇತರರ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪದಲ್ಲಿ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಫ್ ಐಆರ್ ದಾಖಲಾಗಿರುವುದನ್ನು ನಳಿನ್ ಕುಮಾರ್ ಕಟೀಲ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು. 'ಜನಾಧಿಕಾರ ಸಂಘರ್ಷ ಪರಿಷತ್ ಸಹ-ಸಂಸ್ಥಾಪಕ ಆದರ್ಶ್ ಆರ್ ಅಯ್ಯರ್ ಅವರು ದೂರು ದಾಖಲಿಸಿದ್ದರು.
ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣದ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಬ್ಬಂದಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2024-25ನೇ ಸಾಲಿಗಾಗಿ ವಿವಿಧ ಸ್ನಾತಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ನವೆಂಬರ್ 13 ರಂದು ಈ ಹಗರಣ ಬೆಳಕಿಗೆ ಬಂದಿತ್ತು. ತನಿಖೆಯ ಸಂದರ್ಭದಲ್ಲಿ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಆಡಳಿತವನ್ನು ಪ್ರಶ್ನಿಸಲಾಗಿದೆ. ಬಂಧನಕ್ಕೊಳಗಾಗಿರುವವರಲ್ಲಿ, ಕೆಲವು ಎಂಜಿನಿಯರಿಂಗ್ ಕಾಲೇಜುಗಳ ಕೆಲವು ಸಿಬ್ಬಂದಿ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement