
ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದೆ. ಆದರೆ ಅವರು ಬರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದ್ದು, ಅದನ್ನು ತಮ್ಮ ಸರ್ಕಾರ ವಿರೋಧಿಸುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.
"ನಾನು ಅವರಿಗೆ ಚರ್ಚೆಗೆ ಬರುವಂತೆ ಹೇಳಿದ್ದೆ, ಆದರೆ ಅವರು ಬಂದಿಲ್ಲ. ನಾನು ಸಮುದಾಯದ ಹತ್ತು ಪ್ರತಿನಿಧಿಗಳಿಗೆ ಮಾತುಕತೆಗೆ ಬರುವಂತೆ ಹೇಳಿದ್ದೇನೆ. ಆದರೆ ಅವರು ಬರಲಿಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.
ಪ್ರತಿಭಟನಾಕಾರರು ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯನ್ನು ನಾವು ವಿರೋಧಿಸುವುದಿಲ್ಲ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಮತ್ತು ಅವರು ಅದನ್ನು ಮಾಡುತ್ತಿದ್ದಾರೆ" ಎಂದರು.
ಪಂಚಮಸಾಲಿ ಸಮುದಾಯದ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದರು.
ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದ್ದು, ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
Advertisement