
ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಪಂಚಮಸಾಲಿ ಸಮಾಜದವರನ್ನು 2ಎ ವ್ಯಾಪ್ತಿಗೆ ತರಬೇಕು ಎಂಬ ಅವರ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸಿದ್ದರಾಮಯ್ಯ ಅವರಿಗೆ ತಿಳಿಸಿದರು.
ಪಂಚಮಸಾಲಿ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಲಿಷ್ಠ ಸಮುದಾಯವಾಗಿದ್ದು, ಅವರನ್ನು 2ಎ ವ್ಯಾಪ್ತಿಗೆ ತರಬಾರದು ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಯೆಣ್ಣೆಗೆರೆ ಆರ್.ವೆಂಕಟರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕೂಡಲಸಂಗಮ ಪಂಚಮಸಾಲಿ ಮಠದ ಮಠಾಧೀಶ ಬಸವ ಜಯಮೃತ್ಯುಂಜಯ ಸ್ವಾಮಿ ನೇತೃತ್ವದ ಪಂಚಮಸಾಲಿ ಲಿಂಗಾಯತ ಸಮಾಜದವರು ತಮ್ಮನ್ನು 2ಎಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಸ್ತುತ ಪಂಚಮಸಾಲಿ ಲಿಂಗಾಯತರು ಪ್ರವರ್ಗ 3 ಬಿ ಮೀಸಲಾತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯವನ್ನು ಪ್ರವರ್ಗ 2 ಎ ಗೆ ಬದಲಾಯಿಸಿ ಮೀಸಲಾತಿ ಕೊಡಬೇಕು ಎಂಬ ಬೇಡಿಕೆ ಇದೆ. ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ.
ಈ ಮಧ್ಯೆ, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹೊಸ ಮೀಸಲಾತಿ ನೀತಿಯನ್ನು ಸಂಪೂರ್ಣವಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.
ಲಿಂಗಾಯತ ಪಂಗಡದೊಳಗೆ ಪಂಚಮಸಾಲಿ ಸಮುದಾಯ ಅತಿ ದೊಡ್ಡ ಸಮುದಾಯ ಎಂದು ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅಧಿಕಾರಿಗಳ ಕ್ರಮವನ್ನು ಖಂಡಿಸಿದರು. ಲಾಠಿ ಪ್ರಹಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದರು.
Advertisement