
ಬೆಂಗಳೂರು: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು. ಇಂದು ಎಫ್ಐಆರ್ ರದ್ದುಗೊಳಿಸಿ ತೀರ್ಪು ನೀಡಿದೆ.
ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
"ರಾಹುಲ್ ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳು ಇಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು" ಎಂದು ಯತ್ನಾಳ್ ಪರ ವಕೀಲರು ವಾದಿಸಿದ್ದರು.
Advertisement