
ಬೆಂಗಳೂರು: ಮಾರತ್ ಹಳ್ಳಿಯಲ್ಲಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಅವರು ಜಾಮೀನು ಕೋರಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಡಿಸೆಂಬರ್ 9 ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಅತುಲ್ ಸುಭಾಷ್, ತನ್ನ ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಹೇಳಿಕೆಯಲ್ಲಿ ಆರೋಪಿಸಿದ್ದರು.
ಬಳಿಕ ನಿಕಿತಾ ಸಿಂಘಾನಿಯಾ ಅವರನ್ನು ಹರಿಯಾಣದ ಗುರುಗ್ರಾಮದಲ್ಲಿ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಡಿಸೆಂಬರ್ 14 ರಂದು ಬಂಧಿಸಲಾಗಿತ್ತು. ಅವರನ್ನು ಬೆಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.
ನಿಕಿತಾ ಸಿಂಘಾನಿಯಾ ಹಾಗೂ ಆಕೆಯ ತಾಯಿ, ಸಹೋದರ ಗುರುವಾರ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಜಂಟಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ನ್ಯಾಯಾಂಗದ ಬಂಧನದಲ್ಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾಗಿದ್ದ ಸುಭಾಷ್ ಆತುಲ್, ತನ್ನ ಪತ್ನಿ, ಆಕೆಯ ಕುಟುಂಬ ಸದಸ್ಯರು ಹಾಗೂ ಉತ್ತರ ಪ್ರದೇಶ ಮೂಲದ ಜಡ್ಜ್ ಒಬ್ಬರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಸಂಬಂಧ ಅತುಲ್ ಸಹೋದರ ನಿಕಿತಾ, ಆಕೆಯ ತಾಯಿ ನಿಶಾ , ಸಹೋದರ ಅನುರಾಗ್ ಹಾಗೂ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ವಿರುದ್ಧ ಕಿರುಕುಳದ ದೂರು ದಾಖಲಿಸಿದ್ದರು. ಇತ್ತೀಚಿಗೆ ನಿಕಿತಾ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಿತ ಜಾಮೀನು ಮಂಜೂರು ಮಾಡಿತ್ತು.
Advertisement