
ಬೆಂಗಳೂರು: ಮಹದೇವಪುರ ವಲಯದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಸೂಕ್ತ ಸ್ಥಳಗಳನ್ನು ಗುರುತಿಸುವಂತೆ ಅಧಿಕಾರಿಗಳಿಗ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಸೂಚನೆ ನೀಡಿದರು.
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗಿರಿನಾಥ್ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 200 ಹೊಸ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಖಾಲಿ ಜಾಗ/ ಸಾರ್ವಜನಿಕ ಸ್ಥಳಗಳನ್ನು ಗುರುತಿಸಬೇಕು. ಆ ಬಳಿಕ ಟೆಂಡರ್ ಕರೆದು ಕಾಲಮಿತಿಯೊಳಗಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಕೆ.ಆರ್. ಪುರ ವ್ಯಾಪ್ತಿಯ ಆರ್.ಎನ್.ಎಸ್ ಕಾಲೊನಿ, ಜೈಭುವನೇಶ್ವರಿ ಬಡಾವಣೆ, ಬನಶಂಕರಿ ಬಡಾವಣೆ ಸುತ್ತಮುತ್ತಲಿನ ಚರಂಡಿಗಳ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಇದರಿಂದ ಸೊಳ್ಳೆಕಾಟ ಹೆಚ್ಚಾಗಿದೆ ಎಂದು ನಾಗರಿಕರು ದೂರಿದರು.
‘ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರು ಸ್ಥಳ ಪರಿಶೀಲನೆ ನಡೆಸಬೇಕು. ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಔಷಧ ಸಿಂಪಡಣೆ ಹಾಗೂ ಫಾಗಿಂಗ್ ಮಾಡಿ ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
ಕಳೆದ ಬಾರಿಯ ಕಾರ್ಯಕ್ರಮದಲ್ಲಿ ನಾಗರಿಕರು ಸಲ್ಲಿಸಿದ ಬಹುತೇಕ ದೂರುಗಳಿಗೆ ಪರಿಹಾರ ಕಲ್ಪಿಸಲಾಗಿದೆ. ಇನ್ನು ಕೆಲವು ಸಮಸ್ಯೆಗಳು ದೀರ್ಘಕಾಲದ ಸಮಸ್ಯೆಗಳಾಗಿದ್ದು, ಆದಷ್ಟು ಬೇಗ ಅವುಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ನಾಗರಿಕರಿಂದ 30ಕ್ಕೂ ಹೆಚ್ಚು ದೂರುಗಳು ಬಂದಿದ್ದು, ಆದಷ್ಟು ಬೇಗ ಅವುಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
Advertisement