ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಕಲ ಸಿದ್ಧತೆ; ಡಿಸೆಂಬರ್ 26-27ರಂದು ಐತಿಹಾಸಿಕ ಕಾರ್ಯಕ್ರಮ!
ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ಶತಮಾನೋತ್ವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಶನಿವಾರ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆವಹಿಸಿ, ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದು, ಅವಿಸ್ಮರಣೀಯ ಕ್ಷಣ. ಈ ಘಟನೆಯ ಮೆಲುಕು ಹಾಕಲು ಡಿ.26 ರಂದು ಗಾಂಧಿ ಬಾವಿ ಬಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಭೆ ಕರೆಯಲಾಗಿದೆ. ಡಿ.27ರಂದು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಎಲ್ಲಾ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆಂದು ಹೇಳಿದರು.
ಕಾರ್ಯಕ್ರಮ ಯಶಸ್ವಿಗಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ, ಹಿರಿಯ ಮುಖಂಡರು ಸೇರಿದಂತೆ 60 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, 150 ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.
ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಉದ್ಘಾಟನೆ ನಡೆಯಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಎಲ್ಲಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈಗಾಗಲೇ ಬೆಳಗಾವಿ ನಗರದಲ್ಲಿ ಲೈಟಿಂಗ್ ಅಳವಡಿಸಿದ್ದು, ಸಾರ್ವಜನಿಕರು ಲೈಟಿಂಗ್ ವೀಕ್ಷಿಸುತ್ತಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಪಕ್ಷ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ