
ಬೆಂಗಳೂರು: ತುಮಕೂರು ರಸ್ತೆಯಲ್ಲಿ ಶನಿವಾರ ಕಂಟೈನರ್ ಪಲ್ಟಿಯಾಗಿ ಕಾರು ನುಜ್ಜುಗುಜ್ಜಾದ ಪರಿಣಾಮ ಬೆಂಗಳೂರು ಮೂಲದ ಸಾಫ್ಟ್‌ವೇರ್ ಕಂಪನಿಯೊಂದರ ಸಿಇಒ ಮತ್ತು ಅವರ ಕುಟುಂಬದ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಕಂಟೈನರ್ ಚಾಲಕನಿಗಾಗಿ ಕಾಯುತ್ತಿದ್ದಾರೆ. ಆತ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಕಂಟೈನರ್ ಪಲ್ಟಿಯಾಗಲು ನೀಲಿ ಬಣ್ಣದ ಕಾರು ಕಾರಣವಾಗಿದ್ದು, ಅದನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂಬ ವರದಿಗಳನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಕಂಟೈನರ್ ಚಾಲಕನನ್ನು ಜಾರ್ಖಂಡ್‌ನ ಹರ್ಸಿಫ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಸೋಮವಾರ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ವಶಕ್ಕೆ ತೆಗೆದುಕೊಳ್ಳುತ್ತೇವೆ. ಅಪಘಾತಕ್ಕೆ ಕಾರಣವಾದ ಕಂಟೈನರ್ ನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಿಸಿದ್ದಾರೆ.
ಮೃತ ಚಂದ್ರಮ್ ಯೆಗಪಗೋಳ್ ಅವರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ನೆಲಮಂಗಲ ಸಂಚಾರ ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನೆಲಮಂಗಲ ಡಿವೈಎಸ್ಪಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರು ಜನರ ಕುಟುಂಬ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ-4 ರ ತಾಳಕೆರೆ ಬಳಿ ಕಂಟೇನರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿತ್ತು.
ಶನಿವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಕಂಟೈನರ್ ಅದರ ಮುಂಭಾಗದಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿ ಕಾರು ಮೇಲೆ ಬಿದ್ದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ಆರು ಮಂದಿಯ ಮೃತದೇಹಗಳನ್ನು ಭಾನುವಾರ ಹುಟ್ಟೂರು ಮಹಾರಾಷ್ಟ್ರದ ಮೊರಬಗಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.
Advertisement