ಮಾಜಿ ಪ್ರಧಾನಿ Dr. Manmohan Singh ನಿಧನ: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಗಳು ರದ್ದು!

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Gandhi bharata event-Manmohan Singh
ಗಾಂಧಿ ಭಾರತ- ಡಾ.ಮನಮೋಹನ್ ಸಿಂಗ್ online desk
Updated on

ಬೆಳಗಾವಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಮುಂದಿನ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

1924 ರಲ್ಲಿ ಗಾಂಧಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದರ ಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ಡಿ.26-27 ರಂದು "ಗಾಂಧಿ ಭಾರತ", ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಕಾಂಗ್ರೆಸ್ ನ ಹೈಕಮಾಂಡ್ ನಾಯಕರು ಬೆಳಗಾವಿಗೆ ಆಗಮಿಸಿದ್ದರು.

ಆದರೆ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಕಾರ್ಯಕ್ರಮ ರದ್ದುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಸಹ ದೆಹಲಿಗೆ ತೆರಳಿ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Gandhi bharata event-Manmohan Singh
ಮಾಜಿ ಪ್ರಧಾನಿ Dr. Manmohan Singh ನಿಧನ; ಆರ್ಥಿಕ ಸುಧಾರಣೆಯ ಹರಿಕಾರ ಇನ್ನಿಲ್ಲ!

ಸಮಾವೇಶ ನಡೆಯಬೇಕಿದ್ದ ಸ್ಥಳದಲ್ಲಿ ನಡೆಯಲಿದೆ ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಸಭೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು" ಎಂದರು.

"ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು" ಎಂದು ಹೇಳಿದರು.

"ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು" ಎಂದು ಮನವಿ ಮಾಡಿದರು.

"ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು" ಎಂದು ತಿಳಿಸಿದ್ದಾರೆ.

ಅಂತಿಮ ದರ್ಶನಕ್ಕಾಗಿ ದೆಹಲಿಗೆ ಪ್ರಯಾಣ

ನೀವು ಸಹ ದೆಹಲಿಗೆ ತೆರಳುವಿರಾ ಎಂದು ಕೇಳಿದಾಗ, "ನಾನು ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು" ಎಂದು ಹೇಳಿದರು.

ದೇಶವನ್ನು ಕಾಪಾಡಿದ ಆಪದ್ಬಾಂಧವ ಸಿಂಗ್

ಇಂದು ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೆ ಅದಕ್ಕೆ ಪ್ರಮುಖ ಕಾರಣ ಮನಮೋಹನ್ ಸಿಂಗ್ ಅವರ ಕ್ರಾಂತಿಕಾರಿ ನೀತಿಗಳು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗ ಜಾಗತೀಕರಣಕ್ಕೆ ಒಡ್ಡಿಕೊಳ್ಳುವ ಮೂಲಕ ದೇಶವನ್ನು ಕಾಪಾಡಿದ ಆಪದ್ಭಾಂದವ. ಇಂದು ಸಿಂಗ್ ಅವರು ದೈಹಿಕವಾಗಿ ನಮ್ಮಿಂದ ದೂರವಾಗಿರಬಹುದು. ಆದರೆ ಅವರು ಈ ದೇಶಕ್ಕೆ ನೀಡಿರುವ ಕೊಡುಗೆ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅವರ ಒಡನಾಡಿಗಳಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com