ಬಂದೂಕಿನಿಂದ ಬದಲಾವಣೆ ಅಸಾಧ್ಯ, ಮುಖ್ಯವಾಹಿನಿಗೆ ಬನ್ನಿ: ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಕರೆ

ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ ಸರ್ಕಾರ ನೆರವಾಗುತ್ತದೆ ಎಂದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ಆಗಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ. ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದರು.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ಕಳೆದುಕೊಳ್ಳುತ್ತಾರೆ. ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ನೀಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ/ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡುತ್ತೇನೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು ಎಂದರು.

ಸಂಗ್ರಹ ಚಿತ್ರ
ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ

ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಸ್ಪಷ್ಟಪಡಿಸಬಯಸುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com