
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿಯನ್ನು(ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಪ್ರಕರಣದಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರನ್ನು ವಿಶೇಷ ವಕೀಲರನ್ನಾಗಿ ನೇಮಿಸಲಾಗಿದೆ. ಅಲ್ಲದೆ ಎಸ್‌ಎಲ್‌ಪಿಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಂತೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಆದೇಶದಲ್ಲಿ ಸೂಚಿಸಲಾಗಿದೆ.
ನಟ ದರ್ಶನ್ ಅವರು 131 ದಿನಗಳ ಬಂಧನದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅಕ್ಟೋಬರ್ 30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ನಂತರ ಹೈಕೋರ್ಟ್ ಡಿಸೆಂಬರ್ 13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸಾಮಾನ್ಯ ಜಾಮೀನು ಮಂಜೂರು ಮಾಡಿತ್ತು.
ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 3,991 ಪುಟಗಳ ಸಮಗ್ರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Advertisement