ಕೋಲಾರ: ಶಾಲೆ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಯ ಮತ್ತೊಂದು ವಿಡಿಯೋ ವೈರಲ್!
ಬೆಂಗಳೂರು: ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳು ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದ ಪ್ರಕರಣದ ನಂತರ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಕೃತ್ಯಗಳ ವಿರುದ್ಧ ಎಚ್ಚರಿಕೆ ನೀಡಿದ ಹೊರತಾಗಿಯೂ, ಶಾಲಾ ಬಾಲಕಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದಿದ್ದು, ಶಾಲಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಜನವರಿ 30 ರಂದು ಸರ್ಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಕಳೆದ ಎರಡು ತಿಂಗಳಲ್ಲಿ ನಡೆದ ಮೂರನೇ ಪ್ರಕರಣವಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಈ ಹಿಂದೆಯೂ ಮಕ್ಕಳಿಂದ ಶಾಲೆಯ ಶೌಚಾಲಯ ಶುಚಿಗೊಳಿಸಿದ ಘಟನೆ ನಡೆದಿತ್ತು. ಕೆಲವು ದಿನಗಳ ಹಿಂದೆ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವ ವಿಡಿಯೊವೊಂದು ವೈರಲ್ ಆಗಿತ್ತು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕುದಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿತ್ತು.
ಈ ಬೆಳವಣಿಗೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿಕ್ಷಣ ಇಲಾಖೆ ಮುಖ್ಯಶಿಕ್ಷಕಿಯನ್ನು ಅಮಾನತುಗೊಳಿಸಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಬಂಧಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರು.