ಮುದ್ದೇಬಿಹಾಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಬಳಿ ಸಾಕಷ್ಟು ಹಣವಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿ ಆರೋಪವನ್ನು ಶುಕ್ರವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ: ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಬಳಿ ಸಾಕಷ್ಟು ಹಣವಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿ ಆರೋಪವನ್ನು ಶುಕ್ರವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಇಂದು ಮುದ್ದೇಬಿಹಾಳ ತಾಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ರಾಜ್ಯದ ಆರ್ಥಿಕ ಸ್ಥಿತಿ ಕುರಿತು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಇಂದು 227 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದ್ದೇವೆ. ಸರ್ಕಾರದ ಬಳಿ ಹಣವಿಲ್ಲದಿದ್ದರೆ ಈ ನಿಧಿ ಎಲ್ಲಿಂದ ಬಂತು. ನಾವು ಅಭಿವೃದ್ಧಿ ಕಾಮಗಾರಿ ಆರಂಭಿಸಿದ್ದರಿಂದ ಬಿಜೆಪಿ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಅಧಿಕಾರಕ್ಕೆ ಬಂದ 7 ತಿಂಗಳೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮೂಲಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ನಮ್ಮ ಸರ್ಕಾರ ಈಡೇರಿಸಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ
ನಮ್ಮ ಸರ್ಕಾರ ಕೇವಲ ಗ್ಯಾರಂಟಿಗಳನ್ನು ಜಾರಿಗೆ ತಂದಿಲ್ಲ. ಇತರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೂ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಮಾಜದಲ್ಲಿನ ತಾರತಮ್ಯಕ್ಕೆ ಜಾತಿ ವ್ಯವಸ್ಥೆಯೇ ಕಾರಣ ಎಂದ ಸಿಎಂ, 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರು ಮತ್ತು ಅವರ ಸಮಕಾಲೀನರು ಜಾತಿಯ ಆಧಾರದ ಮೇಲೆ ಭೇದಭಾವ ಮಾಡದ ಸಮಾಜವನ್ನು ರಚಿಸಲು ಯತ್ನಿಸಿದರು ಎಂದರು.

ಇತ್ತೀಚೆಗಷ್ಟೇ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಇದು ರಾಜಕೀಯ ಲಾಭಕ್ಕಾಗಿ ಮಾಡಿಲ್ಲ. ಸಮಾನತೆಯ ಸಮಾಜವನ್ನು ನಿರ್ಮಿಸುವಲ್ಲಿ ಬಸವೇಶ್ವರರ ಶ್ರಮವನ್ನು ಗುರುತಿಸಲು ಮಾಡಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ವಿವಿಧ ಮಠಾಧೀಶರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ, ಸನ್ಮಾನಿಸಿದರು. ಈ ವೇಳೆ ಸಚಿವರಾದ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com