ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಮೀಸಲು: ಮಹಿಳಾ ಮತ್ತು ಮಕ್ಕಳ ಕ್ಷೇತ್ರಕ್ಕೆ ಬಜೆಟ್'ನಲ್ಲಿ ಭರ್ಜರಿ ಕೊಡುಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

  • ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

  • ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.

  • ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

  • Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.

  • ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.

  • ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

  • ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.

  • ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು.

  • ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು, ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.

  • ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com