ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದು

ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್‌ ಹಾಲ್‌ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ಯುವ ಬ್ರಿಗೇಡ್‌ ಸಂಸ್ಥಾಪಕ...
ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ)
ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್‌ ಹಾಲ್‌ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ಮಂಗಳವಾರ ರದ್ದುಪಡಿಸಿದೆ.

ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿಇನ್‌ಸ್ಪೆಪೆಕ್ಟರ್‌ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರ ವಿರುದ್ಧ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನುಬಾಹಿರ ಎಂಬ ವಾದ ಪುರಸ್ಕರಿಸಿ ನ್ಯಾಯಾಲಯ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದೆ.

ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ)
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಅಲ್ಲದೇ, ರಾಜಶೇಖರಾನಂದ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪು ಹಾಗೂ ಸುಪ್ರೀಂ ಕೋರ್ಟ್‌ ಈ ಸಂಬಂಧ ನೀಡಿರುವ ತೀರ್ಪನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸೂಲಿಬೆಲೆ ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು ಫ್ರೀಡಂ ಪಾರ್ಕ್‌ ಹೊರತುಪಡಿಸಿ ಬೆಂಗಳೂರಿನ ಇತರೆ ಭಾಗದಲ್ಲಿ ಪ್ರತಿಭಟನೆ ನಡೆಸಬಾರದು ಎಂದು ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್‌ ಜೆ ಪಾರ್ಕ್‌ ಠಾಣೆಯ ಇನ್‌ಸ್ಪೆಪೆಕ್ಟರ್‌ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ ಎಂದರು.

ನಿಯಮದ ಪ್ರಕಾರ ಇನ್‌ಸ್ಪೆಕ್ಟರ್‌ ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.

ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ)
ಚಕ್ರವರ್ತಿ ಸೂಲಿಬೆಲೆ ಭಾಷಣದ ವೇಳೆ ಕಪ್ಪು ಬಾವುಟ ಪ್ರದರ್ಶಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಲ್ಲು ತೂರಾಟ!

ಏನಿದು ಪ್ರಕರಣ?

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ 2022ರ ಜುಲೈ 28ರಂದು ಟೌನ್‌ ಹಾಲ್‌ ಮುಂಭಾಗ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ‘ಜಿಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್‌ ನೆಟ್ಟಾರ್‌ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್‌ ಮಾಡಬೇಕು’ ಎಂದು ಘೋಷಣೆ ಕೂಗಿದ್ದರು. ಎಸ್‌ ಜೆ ಪಾರ್ಕ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಂ ಆರ್‌ ಸತೀಶ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ, ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್‌ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್‌ ಶೆಟ್ಟಿ ಮತ್ತು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.

ಫ್ರೀಡಂ ಪಾರ್ಕ್‌ ಹೊರತುಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಈ ನಿಯಮ ಉಲ್ಲಂಘಿಸಿ ಮತ್ತು ಸರ್ಕಾರದಿಂದಾಗಲಿ ಅಥವಾ ಸಂಬಂಧಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಆರೋಪಿಗಳು ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com