ಬೆಂಗಳೂರು: ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೆಯೇ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ, ಯಾವುದೇ ಕಾರಣವಿಲ್ಲದೆ ಏಕೆ ಬಂಧನಕ್ಕೊಳಪಡಿಸುತ್ತಾರೆಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಬಂಧನ ಕೇಸ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡದವರ ಮೇಲೆ ಏಕೆ ಕ್ರಮ ಆಗುತ್ತದೆ? ನಮ್ಮ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ನಿರಪರಾಧಿಗಳಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಅರಣ್ಯ ಇಲಾಖೆ ಅನುಮತಿ ಇಲ್ಲದಿದ್ದರೆ ಕ್ರಮ ಆಗುತ್ತದೆ. ಈ ವಿಚಾರದಲ್ಲಿ ನಾವ್ಯಾರೂ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಭಯ ಇರಬೇಕೆಂದು ಕ್ರಮಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮರ ಕತ್ತರಿಸಿ ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಈ ಪ್ರಕರಣದ ಕುರಿತು ಮಾತನಾಡಿದ್ದ ಪ್ರತಾಪ್ ಸಿಂಹ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದರು.
Advertisement