2030ರ ವೇಳೆಗೆ ಕೆಎಸ್ ಡಿಎಲ್ 5,000 ಕೋಟಿ ವಹಿವಾಟಿನ ಗುರಿ- ಎಂಬಿ ಪಾಟೀಲ್

ಕೆಎಸ್ ಡಿಎಲ್  ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಎಂಬಿ ಪಾಟೀಲ್
ಎಂಬಿ ಪಾಟೀಲ್
Updated on

ಬೆಂಗಳೂರು: ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಕೆಎಸ್ ಡಿಎಲ್  ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಅಧಿಕಾರಿಗಳಿಗೆ ಹೇಳಿದ್ದಾರೆ.

100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ಡಿಎಲ್) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ಬೀಡಲಾಗುತ್ತಿದ್ದು, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆ ಕೆಎಸ್ಡಿಎಲ್ ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಕೆಎಸ್ ಡಿಎಲ್ ಆವರಣದಲ್ಲಿ ದಿನನಿತ್ಯದ ದಿನಸಿ ಪದಾರ್ಥಗಳು, ಡೆಟಾಲ್, ಹ್ಯಾಂಡ್ ಸೋಪ್ ಮುಂತಾದವೆಲ್ಲ ಲಭ್ಯವಾಗಬೇಕು. ಸದ್ಯಕ್ಕೆ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆ ವಿತರಣೆ ಚೆನ್ನಾಗಿ ನಡೆಯುತ್ತಿದೆ. ಸಂಸ್ಥೆಯು ಕಾರ್ಮಿಕರ ಯೋಗಕ್ಷೇಮಕ್ಕೂ ಆದ್ಯತೆ ನೀಡುವ ಉತ್ತರದಾಯಿತ್ವವನ್ನು ಪ್ರದರ್ಶಿಸಿದೆ ಎಂದು ಅವರು ಹೇಳಿದರು.

ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದರು.  

ಕೆಎಸ್ಡಿಎಲ್ ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಐದು ಲಕ್ಷ ರೂಪಾಯಿ ಮೊತ್ತದ ಚಿಕ್ಸಿತೆ ಪಡೆಯಬಹುದಾದ  ಹೆಲ್ತ್ ಕಾರ್ಡ್ ವಿತರಿಸಿದ ಸಚಿವರು, 169 ಕಾಯಂ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರದ ಮೇಲೆ ಕೆಲಸ‌‌ ಮಾಡುತ್ತಿರುವ 464 ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಮಲ್ಲಿಗೆ ಆಸ್ಪತ್ರೆ ಜತೆಗೂ ಕೆಎಸ್ಡಿಲ್ ಒಪ್ಪಂದ ಮಾಡಿಕೊಂಡಿದ್ದು ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ ಎಂದು ತಿಳಿಸಿದರು.

ಎಂಎಸ್ಐಎಲ್ ಗೆ ಮತ್ತಷ್ಟು ಬಲ:  ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ನಡೆಸುವ ವಹಿವಾಟನ್ನು ವಿಸ್ತರಿಸಲು ನಿರ್ಧರಿಸಲಾಗಿದ್ದು, ಕೇರಳ ಮಾದರಿಯಲ್ಲಿ ಚಿಟ್ ಫಂಡ್ ನಡೆಸಲಾಗುವುದು. ಇದರ ಮೂಲಕ ವಾರ್ಷಿಕ 10 ಸಾವಿರ ಕೋಟಿ ರೂ. ವ್ಯವಹಾರ ಬೆಳೆಸಲಾಗುವುದು. ಇದರಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಂಡು, ಖಾಸಗಿಯವರಿಗೆ ಆರೋಗ್ಯಕರ ಸ್ಪರ್ಧೆ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಎಂಎಸ್ಐಎಲ್ ನ‌ 200 ಮದ್ಯ ಮಾರಾಟ ಪ್ರೀಮಿಯಂ ಬೋಟಿಕ್ ಗಳನ್ನು ಆರಂಭಿಸಲಾಗುತ್ತಿದೆ. ಇತ್ತೀಚೆಗೆ ಬಸವೇಶ್ವರ ನಗರದಲ್ಲಿ ಹೊಸ ವರ್ಷ ದಿನ ಆರಂಭಿಸಿದ್ದು ಅಲ್ಲಿ‌ 30-40ರಷ್ಟು ವಹಿವಾಟು ಹೆಚ್ಚಾಗಿದೆ. ಯಾವ ಖಾಸಗಿ ಬೋಟಿಕ್ ಗಳಿಗೂ ಕಡಿಮೆ‌ ಇಲ್ಲದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದೇ ರೀತಿಯಲ್ಲಿ ಲೇಖಕ್ ನೋಟ್ ಪುಸ್ತಕಗಳ ಗುಣಮಟ್ಟವನ್ನೂ ಹೆಚ್ಚಿಸಲಾಗುವುದು. ಒಟ್ಟಿನಲ್ಲಿ ಸರ್ಕಾರಿ ಉದ್ದಿಮೆಗಳಿಗೆ ಕಾರ್ಪೊರೇಟ್ ಸ್ಪರ್ಶ ನೀಡಿ, ಲಾಭದ ಹಳಿಗೆ ತರಲಾಗುವುದು ಎಂದು ಪಾಟೀಲ ಪ್ರತಿಪಾದಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com