ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಜನರು ಸಲ್ಲಿಸಿದ ಅರ್ಜಿಗಳಲ್ಲಿ ಬಿಬಿಎಂಪಿ, ಕಂದಾಯ ಇಲಾಖೆಯದ್ದೇ ಹೆಚ್ಚು!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ವಾಸವಾಗಿರುವ ಜನರ ತೊಂದರೆ, ಸಮಸ್ಯೆಗಳನ್ನು ಪರಿಹರಿಸಲು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಆರಂಭಿಸಿರುವ ಜನಸ್ಪಂದನಾ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ವಾಸವಾಗಿರುವ ಜನರ ತೊಂದರೆ, ಸಮಸ್ಯೆಗಳನ್ನು ಪರಿಹರಿಸಲು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಆರಂಭಿಸಿರುವ ಜನಸ್ಪಂದನಾ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಶುಕ್ರವಾರ ಯಲಹಂಕದಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಸುಮಾರು 2,600 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಬಹುತೇಕ ಅರ್ಜಿಗಳು ಬಿಬಿಎಂಪಿ ಹಾಗೂ ಕಂದಾಯ ಇಲಾಖೆಗೆ ಸಲ್ಲಿಕೆಯಾಗಿರುವುವುದು ಕಂಡು ಬಂದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಂದಿರುವ ಅರ್ಜಿಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾರ್ಡ್ ಮಟ್ಟದಲ್ಲಿ ಅರ್ಜಿಗಳನ್ನು ಪ್ರತ್ಯೇಕಿಸಿ, ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಗಡುವು ನೀಡಿದರು.

ಅರ್ಜಿದಾರರ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ, ಸ್ಥಳ ಪರಿಶೀಲನೆ ನಡೆಸಬೇಕು. ಜನರಿಗೆ ತೊಂದರೆ ಕೊಡಬಾರದು ಎಂಬ ಸತ್ಯವನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಜನರು ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಯಾವ ಇಲಾಖೆಗೆ ಹೆಚ್ಚು ಅರ್ಜಿಗಳು ಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಅರ್ಜಿಗಳು ಬಿಬಿಎಂಪಿ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಖಾತಾ ಸಮಸ್ಯೆಗೆ ಸಂಬಂಧಿಸಿದಂತೆ ಸಾಕಷ್ಟು ಪ್ರಕರಣಗಳಿವೆ. ಸಾಕಷ್ಟು ಮಂದಿ ಮನೆಗಳಿಗೆ ಮನವಿ ಸಲ್ಲಿಸಿದ್ದಾರೆ. ರಿಯಾಯಿತಿ ದರದಲ್ಲಿ ವಸತಿ ಕಲ್ಪಿಸುವ ಆಯ್ಕೆ ಇದೆ, ಈ ಕುರಿತು ಇಲಾಖೆಯೊಂದಿಗೆ ಚರ್ಚೆ ನಡೆಸುತ್ತೇನೆ. ಆಸ್ತಿ ತೆರಿಗೆ ಕಟ್ಟದವರಿಗೆ ದಂಡದ ಮೊತ್ತ ಹೆಚ್ಚಿದೆ ಎಂಬುದರ ಬಗ್ಗೆಯೂ ಸಾಕಷ್ಟು ಮನವಿಗಳು ಬಂದಿವೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾನೂನು ಚೌಕಟ್ಟಿನಲ್ಲಿ ಮಾಡಬೇಕಾದ ಕೆಲಸ ಮಾಡಲಾಗುವುದು ಎಂದರು. ಇದೇ ವೇಳೆ ಸುಳ್ಳು ಭರವಸೆಗಳಿಗೆ ಬಲಿಯಾಗದಿರಿ ಎಂದು ಜನರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಿಎ ಮುಗಿಸಿರುವ ದೃಷ್ಟಿಹೀನ ವಿಕಲಚೇತನ ಮಹಿಳೆಯೊಬ್ಬರು ತನಗೆ ಮನೆ, ಉದ್ಯೋಗ ಬೇಕು ಎಂದು ಮನವಿ ಮಾಡಿದರು.

ಈ ವೇಳೆ ಡಿಕೆ.ಶಿವಕುಮಾರ್ ಅವರು ವಿಕಲಚೇತನರ ಕೋಟಾದಡಿ ಫ್ಲ್ಯಾಟ್ ವ್ಯವಸ್ಥೆ ಮಾಡುವಂತೆ ಬಿಡಿಎ ಆಯುಕ್ತರಿಗೆ ಸೂಚಿಸಿದರು. ಅಲ್ಲದೆ, ಆಕೆಗೆ ಪಾಲಿಕೆಯಲ್ಲಿ ಸೂಕ್ತ ಕೆಲಸ ಕೊಡಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com