ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ವ್ಯಾಪಕ ವಿರೋಧ

ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ವಿರೋಧ ಪಕ್ಷದ ನಾಯಕರು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಹಲವು ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಪ್ರತಿಕ್ರಿಯೆ ನೀಡಿ, ಬೆಳಗಾವಿ ವಿಶಾಲ ಕರ್ನಾಟಕಕ್ಕೆ ಸೇರಿ ಅನೇಕ ವರ್ಷಗಳಾಗಿದೆ. ಓಟಿನ ರಾಜಕಾರಣಕ್ಕೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿರುವುದು ವಿಷಾದಕರ. ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟದಿಂದ ಹೊರಗೆ ಇಡಬೇಕು. ಹೆಬ್ಬಾಳ್ಕರ್ ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು. ಹಾಗಾಗಿಯೇ ಬೆಳಗಾವಿ ಅಧಿವೇಶನ ಮಾಡಲಾಗುತ್ತಿದೆ. ಅವರ ಹೇಳಿಕೆ ಬೇರೆಯವರನ್ನು ಕೆರಳಿಸಲಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಹೇಳುವ ಮೂಲಕ ಸಚಿವೆ ಶ್ರೀಮತಿ ಲಕ್ಷೀ ಹೆಬ್ಬಾಳ್ಕರ್ ಅವರು ಕರ್ನಾಟದ ಸಾರ್ವಭೌಮತ್ವ ಹಾಗೂ ಗಡಿನಾಡ ಭಾಷಾ ಸಾಮರಸ್ಯ ಕದಡಲು ಕಿಚ್ಚು ಹಚ್ಚಿದ್ದಾರೆ. ಕನ್ನಡತಿ ಎಂದು ಹೇಳಿಕೊಳ್ಳುವ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ಅವರು ಚುನಾವಣಾ ಕಾಲದಲ್ಲಿ ಸಾಮರಸ್ಯದ ಸಮಾಜಕ್ಕೆ ಬೆಂಕಿ ಹಚ್ಚುವ ಸಾಹಸಕ್ಕೆ ಕೈ ಹಾಕಿರುವುದು ರಾಜಕೀಯ ಹುನ್ನಾರವಲ್ಲದೇ ಬೇರೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಸರ್ಕಾರವೇ ಹಿಂದೂ ವಿರೋಧಿ ಚಟುವಟಿಕೆಗಳಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವುದಲ್ಲದೇ, ಅಲ್ಪಸಂಖ್ಯಾತರನ್ನು ಅಂಕೆಯಿಲ್ಲದೇ ಓಲೈಸುತ್ತಿದೆ. ಮತೀಯ ಸೌಹಾರ್ದತೆ ಕೆದಕುವ ಚಟುವಟಿಕೆಯನ್ನು ಇದೀಗ ಭಾಷಾ ಸಾಮರಸ್ಯತೆಯನ್ನು ಕದಡುವ ನೀಚ ರಾಜಕಾರಣಕ್ಕೂ ವಿಸ್ತರಿಸಿದೆ. ಆ ಮೂಲಕ ನಾಡಿನ ಅಖಂಡತೆ ಹಾಗೂ ದೇಶದ ಸೌರ್ಹತೆಯನ್ನ ಕಾಪಾಡಲು ಯಾವ ಬದ್ದತೆಯು, ಆದ್ಯತೆಯು ಕಾಣುತ್ತಿಲ್ಲ.

ಮತೀಯ ಹಾಗೂ ಭಾಷೆಯ ಹೆಸರಿನಲ್ಲಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ‘ಕೈ’ಯಲ್ಲಿ ಈ ರಾಜ್ಯದ ಆಡಳಿತ ಚುಕ್ಕಾಣಿ ಸಿಲುಕಿರುವುದು ನಾಡಿನ ದುರ್ದೈವವೇ ಸರಿ. ಕರ್ನಾಟಕದ ಪರ, ನಿಷ್ಠೆ ತೋರದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು, ಕನ್ನಡದ ಬದ್ಧತೆಯ ಬಗ್ಗೆ ಉದ್ದುದ್ದ ಭಾಷಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಸಂಪುಟದಿಂದ ವಜಾ ಗೊಳಿಸಲಿ. ಆ ಮೂಲಕ ಕರ್ನಾಟಕದ ಸಾರ್ವಭೌಮತ್ವ ಹಾಗೂ ಭಾಷಾ ಸಾಮರಸ್ಯದ ತಮ್ಮ ನೈಜ ಕಾಳಜಿಯನ್ನು ತೋರಿಸಲಿ ಎಂದು ಹೇಳಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜ.07ರ ಭಾನುವಾರ ನಡೆದ 6ನೇ ಕನ್ನಡ ಸಮಾವೇಶ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕನ್ನಡ ಭಾಷೆ ಹಲವು ವರ್ಷಗಳ ಇತಿಹಾಸ ಹೊಂದಿದೆ. ನಮ್ಮ ಸಾಹಿತಿಗಳು ಇದನ್ನು ಸಾಬೀತು ಮಾಡಿದ್ದಾರೆ. ನಮ್ಮ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತ್ರಿಗಳು ಲಭಿಸಿರೋದು ನಮ್ಮ ಹೆಮ್ಮೆ. ನಮ್ಮ ಕನ್ನಡ ಭಾಷೆ ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ. ಇಂತಹ ನಾಡಿನಲ್ಲಿ ಜನಿಸಲು ನಾವು ಪುಣ್ಯ ಮಾಡಿರಬೇಕು. ಆದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಭಾಷಣದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com