ಹಣವಿಲ್ಲದೆ ಗ್ಯಾರಂಟಿ ಯೋಜನೆಗಳು ನಡೆಯಲು ಸಾಧ್ಯವೇ? ಅಪಪ್ರಚಾರ ನಿಲ್ಲಿಸಿ: ಸ್ವಪಕ್ಷದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಹಣವಿಲ್ಲದೆ ದೊಡ್ಡ ದೊಡ್ಡ ಕಾರ್ಯಕ್ರಮಗಳು ನಡೆಯಲು ಸಾಧ್ಯವೇ? ಗ್ಯಾರಂಟಿ ಯೋಜನೆಗಳ ಕುರಿತು ಮೊದಲು ನೀವು ಅಪಪ್ರಚಾರಗಳ ನಿಲ್ಲಿಸಿ ಎಂದು ಸ್ವಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಣವಿಲ್ಲದೆ ದೊಡ್ಡ ದೊಡ್ಡ ಕಾರ್ಯಕ್ರಮಗಳು ನಡೆಯಲು ಸಾಧ್ಯವೇ? ಗ್ಯಾರಂಟಿ ಯೋಜನೆಗಳ ಕುರಿತು ಮೊದಲು ನೀವು ಅಪಪ್ರಚಾರಗಳ ನಿಲ್ಲಿಸಿ ಎಂದು ಸ್ವಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ ಎಂದು ಹೇಳಿದರು.

ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ.

ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಬೇಕು. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು  ಹಣವಿಲ್ಲದೆ ನಡೆಯಲು ಸಾಧ್ಯವೇ? ನಮ್ಮವರೇ ವಿರೋಧ ಪಕ್ಷಗಳ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆಂದು ತಿಳಿಸಿದರು.

ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ, ನಾವು ಗೆಲ್ಲಲೇಬೇಕು. 28ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು, ಸಕಾರಾತ್ಮಕವಾಗಿರಬೇಕು.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆ ಕರೆದಿಲ್ಲ. ಪ್ರಧಾನಿ ಮೋದಿ ಅವರನ್ನು ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ. ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ.

ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ  66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ?

2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು. 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ. ಸೆಸ್, ಸರ್ಚಾರ್ಜ್ ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ.ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು.
 
ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್‌ಟಿ ಇಂದಾಗುವ  ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ. ರಾಜ್ಯದ  ಸಂಸದರೂ ತುಟಿಕ್ ಪಿಟಿಕ್ಕೆನ್ನದೇ ಇದ್ದಾರೆ. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ. ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಅದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು ಎಂದು ಸೂಚನೆ ನೀಡಿದರು.

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ.

ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ,  ಸಣ್ಣನೀರಾವರಿ ಇಲಾಖೆಯಲ್ಲಿ  2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com