ಬೆಂಗಳೂರು: ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಬೇಕು ಎಂದು ರಾಜ್ಯ ಸರ್ಕಾರ ಬುಧವಾರ ಹೇಳಿದೆ.
ನಿನ್ನೆಯಷ್ಟೇ ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪ ಸಮಿತಿಯ ಎರಡನೆ ಸಭೆ ನಡೆಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ನಡೆಸಲಾಗುತ್ತಿದೆ. ಕೋವಿಡ್ ಇಳಿಮುಖ ಕಾಣುವವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು.
ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ವಿಡುವ ಕೆಲಸವನ್ನ ಸರಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಐ.ಸಿ.ಯು ನಲ್ಲಿ 19 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ವಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೆ ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ 2 ಜನ ಮಾತ್ರ ಸಾವಿಗಿಡಾಗಿದ್ದಾರೆ. ಉಳಿದವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದರು.
Advertisement