ಕಲಬುರಗಿಗೆ ಪ್ರಧಾನಿ ಮೋದಿ ಆಗಮನ: ಗಣ್ಯರಿಂದ ಸ್ವಾಗತ

ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ.

ಕಲಬುರಗಿ: ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ್ದಾರೆ.

ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಗ್ಗೆ 9:30ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯನ್ನು ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಚ ನೀಡಿ ಪ್ರಧಾನಿಯನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ್ ಗುತ್ತೇದಾರ, ಮಾಲಿಕಯ್ಯ ಗುತ್ತೇದಾರ, ಅಮರನಾಥ ಪಾಟೀಲ, ಬಿಜೆಪಿ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಉಪಸ್ಥಿತರಿದ್ದರು. ನಂತರ ಪ್ರಧಾನಮಂತ್ರಿ ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.

ಬೆಂಗಳೂರಿನಲ್ಲಿ ಹೆಚ್ಚಿದ ಭದ್ರತೆ
ಇಂದು ಪ್ರಧಾನಿ ಮೋದಿಯವರು ಬೆಂಗಳೂರಿಗೂ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೇಗೂರು, ಮೈಲನಹಳ್ಳಿ, ಬಿಐಇಟಿಸಿ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.

ಇಡೀ ರಸ್ತೆಯನ್ನು ಬಾಂಬ್ ಸ್ಕ್ವಾಡ್‌ ಹಾಗೂ ಡಾಗ್ ಸ್ಕ್ವಾಡ್‌ನಿಂದ ತಪಾಸಣೆ ನಡೆಸಲಾಗಿದೆ. ಪ್ರತಿ 50 ಮೀಟರ್‌ಗೆ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮಧ್ಯಾಹ್ನ 2.45ರ ವೇಳೆಗೆ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಉದ್ಘಾಟಿಸಲಿದ್ದಾರೆ.

ಇದಲ್ಲದೆ, ಮೋದಿ ಅವರು ವರ್ಚುವಲ್ ಮೂಲಕ ಬೀದರ್‌ನ ನೂತನ ಎಫ್.ಎಂ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಇಂದು (ಜ.19) ಸಂಜೆ 5 ಗಂಟೆ ವೇಳೆಗೆ ವರ್ಚುವಲ್ ಮೂಲಕ ಎಫ್‌ಎಂ ಕೇಂದ್ರ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಆಕಾಶವಾಣಿ ಕೇಂದ್ರದಿಂದ ಪ್ರಸಾರಗೊಳ್ಳುವ ಎಲ್ಲಾ ಕಾರ್ಯಕ್ರಮಗಳು ಮುಂದೆ ಬೀದರ್‌ನ ಎಫ್.ಎಂ ಕೇಂದ್ರದಲ್ಲೂ ಪ್ರಸಾರವಾಗಲಿದೆ.

ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಎಫ್.ಎಂ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಹಾಗೂ ನೂರಾರು ಜನರು ಭಾಗಿಯಾಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com