ಹನುಮ ಧ್ವಜ ತೆರವು ವಿವಾದ: ಮಂಡ್ಯದಲ್ಲಿ ಘರ್ಷಣೆ ತೀವ್ರ, ಪೊಲೀಸರಿಂದ ಲಘು ಲಾಠಿಚಾರ್ಜ್, ಸ್ಥಳದಲ್ಲಿ ಬಿಗುವಿನ ವಾತಾವರಣ

ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇಂದು ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹನುಮ ಧ್ವಜ ಪುನಃಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. 
ಪೊಲೀಸರಿಂದ ಲಾಠಿ ಚಾರ್ಜ್
ಪೊಲೀಸರಿಂದ ಲಾಠಿ ಚಾರ್ಜ್

ಮಂಡ್ಯ: ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇಂದು ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹನುಮ ಧ್ವಜ ಪುನಃಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. 

ಸದ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ, ಈ ಘಟನೆಯು ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷವಾದ ಬಿಜೆಪಿ-ಜೆಡಿಎಸ್ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿಯಿಂದ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರವಾಗಿದೆ. 

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗಳು ಈ ವಿಷಯದ ಬಗ್ಗೆ ಜನರನ್ನು ಪ್ರಚೋದಿಸಲು ಕುಮ್ಮಕ್ಕು ನೀಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. 

ನಡೆದ ಘಟನೆಯೇನು?: ಪೊಲೀಸರು ಮತ್ತು ಜಿಲ್ಲಾಡಳಿತ  'ಹನುಮ ಧ್ವಜ'ದ ಬದಲಿಗೆ ತ್ರಿವರ್ಣ ಧ್ವಜವನ್ನು ಹಾರಿಸಿತ್ತು. ಇದನ್ನು ಪ್ರತಿಭಟಿಸಿ ಇಂದು ಕೆರಗೋಡಿನಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಘೋಷಣೆಗಳ ಮಧ್ಯೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಮುಖಂಡರಾದ ಸಿ ಟಿ ರವಿ, ಪ್ರೀತಂ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೆರವಣಿಗೆಯು ಮಂಡ್ಯ ನಗರಕ್ಕೆ ತಲುಪುತ್ತಿದ್ದಂತೆ, ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ಚಿತ್ರವಿರುವ ಫ್ಲೆಕ್ಸ್ ನ್ನು ಗುರಿಯಾಗಿಸಲು ಪ್ರಯತ್ನಿಸಿದರು ಎಂದು ಆರೋಪಿಸಿ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಧ್ವಜ ತೆರವಿಗೆ ಆಗ್ರಹಿಸಿ ಕೆರಗೋಡು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಬಿಜೆಪಿ, ಜೆಡಿಎಸ್, ಬಜರಂಗದಳ ಕಾರ್ಯಕರ್ತರು ಹಾಗೂ ಇತರೆ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಧ್ವಜವನ್ನು ಅದನ್ನು ಮತ್ತೊಮ್ಮೆ ಹಾರಿಸಬೇಕೆಂದು ಒತ್ತಾಯಿಸಿದ್ದಾರೆ. 

ಪ್ರತಿಭಟನೆಯಲ್ಲಿ ಕೆರಗೋಡು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕೇಸರಿ ಧ್ವಜಾರೋಹಣ ಮಾಡುವವರೆಗೂ ಧರಣಿ ಮುಂದುವರಿಯಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಪರಿಸ್ಥಿತಿ ಹೇಗಿದೆ?: ಕೆರಗೋಡು, ಧ್ವಜಸ್ತಂಭದ ಸುತ್ತಲೂ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ. ಸ್ಥಳದಲ್ಲಿ ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರತಿಭಟನೆಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ಬಂದ್‌ಗೆ ಕರೆ ನೀಡಿದ್ದರಿಂದ ಹೆಚ್ಚಿನ ಅಂಗಡಿಗಳು ಮತ್ತು ಸಂಸ್ಥೆಗಳು ಗ್ರಾಮದಲ್ಲಿ ಮುಚ್ಚಲ್ಪಟ್ಟಿವೆ ಎಂದು ಅವರು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಖಂಡಿಸಿ ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯಲ್ಲಿಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ಜಯನಗರ ಶಾಸಕ ಸಿಕೆ ರಾಮಮೂರ್ತಿ ಹಾಗೂ ಇತರ ಮುಖಂಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಕೆರಗೋಡಿನಲ್ಲಿ 108 ಅಡಿ ಎತ್ತರದ ಧ್ವಜಸ್ತಂಭದಿಂದ ‘ಹನುಮ ದ್ವಜ’ವನ್ನು ಅಧಿಕಾರಿಗಳು ತೆಗೆದ ಬಳಿಕ ಗಲಾಟೆ ನಡೆದಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಧ್ವಜಸ್ತಂಭದ ಸ್ಥಳವು ಪಂಚಾಯಿತಿ ವ್ಯಾಪ್ತಿಗೆ ಬರುತ್ತಿದ್ದು, ಗಣರಾಜ್ಯೋತ್ಸವದಂದು ರಾಷ್ಟ್ರ ಧ್ವಜಾರೋಹಣ ಮಾಡಲು ಅನುಮತಿ ಪಡೆಯಲಾಗಿದೆ ಎಂದು ಹೇಳಿದ್ದರು, ಆದರೆ ಸಂಜೆ ಅದನ್ನು ಬದಲಾಯಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com