ಕರಾವಳಿ ಭಾಗದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ; ಶಾಲಾ, ಕಾಲೇಜುಗಳಿಗೆ ರಜೆ

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್​​​.ಪಾಟೀಲ್ ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು/ಉಡುಪಿ/ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್​​​.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ತಿಳಿಸಿದರು. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್​, ಕಲಬುರಗಿ, ಕೊಡಗು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯದ ಮಳೆ ಕುರಿತು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇಂದು ಉತ್ತರ ಒಳನಾಡಿನ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೆೇಗ (30-40 kmph) ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸಾಂದರ್ಭಿಕ ಚಿತ್ರ
ಧಾರಾಕಾರ ಮಳೆ: ಕರಾವಳಿ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತ

ಭಾರೀ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಕುಂದಾಪುರ ತಾಲೂಕಿನಲ್ಲಿ 138.6 ಮಿ.ಮೀ ಮಳೆಯಾಗಿದ್ದರೆ, ಉಡುಪಿಯಲ್ಲಿ 118 ಮಿ.ಮೀ ಮಳೆಯಾಗಿದೆ. ಕಾರ್ಕಳ ತಾಲೂಕಿನಲ್ಲಿ 63.9 ಮಿ.ಮೀ, ಬೈಂದೂರಿನಲ್ಲಿ 147.3 ಮಿ.ಮೀ ಮಳೆ ದಾಖಲಾಗಿದೆ. ಬ್ರಹ್ಮಾವರ (104 ಮಿ.ಮೀ.), ಕಾಪು (79.5 ಮಿ.ಮೀ.), ಹೆಬ್ರಿ (95.8 ಮಿ.ಮೀ.) ಭಾಗದಲ್ಲಿಯೂ ಭಾರಿ ಮಳೆಯಾಗಿದೆ.

ಉಡುಪಿಯಲ್ಲಿ ಸುರಿದ ಭಾರೀ ಮಳೆಗೆ ಕರಂಬಳ್ಳಿ ವಾರ್ಡ್‌ನ ಹಲವಾರು ಮನೆಗಳು ಜಲಾವೃತವಾಗಿವೆ. ಗುಂಡಿಬೈಲು ಪಾಡಿಗಾರು ರಸ್ತೆಯಲ್ಲಿ ತೀವ್ರ ಪ್ರವಾಹದ ಹಿನ್ನೆಲೆಯಲ್ಲಿ ಪೇಯಿಂಗ್ ಗೆಸ್ಟ್‌ನಲ್ಲಿ ತಂಗಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಹಲವು ತಾಲೂಕುಗಳಲ್ಲಿ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ಉಡುಪಿ ಜಿಲ್ಲೆಯಲ್ಲಿ 10 ಮನೆಗಳು ಭಾಗಶಃ ಹಾನಿಯಾಗಿದ್ದು, ಒಂದು ಮನೆ ಸಂಪೂರ್ಣ ಹಾನಿಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಕಾಳಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆದಿದೆ. ಕದ್ರಾ ಅಣೆಕಟ್ಟಿನ ನಾಲ್ಕು ಗೇಟ್‌ಗಳನ್ನು ತೆರೆಯಲಾಗಿದೆ. ಅಣೆಕಟ್ಟಿನಿಂದ ನದಿಗೆ 10,600 ಕ್ಯೂಸೆಕ್ ನೀರು ಬಿಡಲಾಗಿದ್ದು, ಇನ್ನೂ 21,000 ಕ್ಯೂಸೆಕ್ ವಿದ್ಯುತ್ ಉತ್ಪಾದಿಸಿದ ನಂತರ ಬಿಡುಗಡೆ ಮಾಡಲಾಗಿದೆ, ಇದರೊಂದಿಗೆ 31,600 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಸೋಮವಾರ ಬೆಳಗಿನ ಜಾವದವರೆಗೆ ಅಣೆಕಟ್ಟೆಗೆ 33 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಆದರೆ, ಮಳೆಯ ಪ್ರಮಾಣ ತಗ್ಗಿದ ಕಾರಣ ಸೋಮವಾರ ಸಂಜೆ ವೇಳೆಗೆ ಒಳಹರಿವು 22 ಸಾವಿರ ಕ್ಯೂಸೆಕ್‌ಗೆ ಇಳಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com