
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣ ಜನರಲ್ಲಿ ಭೀತಿ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಜಿಲ್ಲಾಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚನೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು.
ಡಿಸಿ-ಸಿಇಒ ಸಭೆಯಲ್ಲಿ ಡೆಂಗ್ಯೂ ತಡೆಗೆ ಅಗತ್ಯ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ವೇಳೆ ಸೋಂಕು ನಿಯಂತ್ರಿಸಲು ರೋಗಿಗಳ ಆರೈಕೆ, ಮೃತರ ಕುಟುಂಬದವರಿಗೆ ನೈತಿಕವಾಗಿ ಬಲ ತುಂಬುವ ನಿಟ್ಟಿನಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಎರಡು ತಿಂಗಳ ಮಟ್ಟಿಗಾದರೂ ಜಿಲ್ಲಾ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಅನ್ನು ಆರಂಭಿಸಬೇಕು. ಹೈ ಅಲರ್ಟ್ ಆಗಿದ್ದು ಡೆಂಗ್ಯೂ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕೆ ಡಿಸಿ ಹಾಗೂ ಸಿಇಒಗಳೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಹಣದ ಕೊರತೆಯಂತೂ ಇಲ್ಲ. ವಿವೇಚನೆ ಬಳಸಿ ಹಣ ಬಳಕೆ ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7,362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು ಎಂದು ಸೂಚನೆ ನೀಡಿದರು.
ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ನಿತ್ಯ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು.
ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‌ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಪ್ರಚುರಪಡಿಸಬೇಕು ಎಂದು ಇದೇ ವೇಳೆ ಸಿಎಂ ಸೂಚಿಸಿದರು.
ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಗರ ಮತ್ತು ಪಟ್ಟಣಗಳಲ್ಲಿ ಕಸ ಮತ್ತು ಕಟ್ಟಡದ ಅವಶೇಷಗಳನ್ನು ಸುರಿಯುವುದು ವಿಪರೀತವಾಗಿದೆ. ಮಳೆ ನೀರು ನಿಲ್ಲುವುದರಿಂದ ಈ ತಾಣಗಳು ಸೊಳ್ಳೆಗಳ ಉತ್ಪತ್ತಿ ಕೇಂದ್ರಗಳಾಗಿವೆ. ಇವುಗಳ ಮೇಲೆ ನಿಗಾ ಹೆಚ್ಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಬೆಂಗಳೂರಿನಲ್ಲಿ ಬಿಬಿಎಂಪಿ ಡೆಂಗ್ಯೂ ವಿರುದ್ಧ ಹೋರಾಡಲು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
Advertisement