ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಇಡಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಬಂಧಿಸಲಾಗಿದೆ. ಬಂಧಿತ ಹರೀಶ್ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು, ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾರಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಪಿಎ ಹರೀಶ್ ಏಪ್ರಿಲ್ ತಿಂಗಳಿನ ಎರಡನೇ ವಾರ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೋಟೆಲ್ ಬಳಿ ಪದ್ಮನಾಭರಿಂದ 25 ಲಕ್ಷ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ. ಮಾಜಿ ಸಚಿವ ನಾಗೇಂದ್ರ ಅವರ ಪರವಾಗಿ ಹರೀಶ್ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್ ಪಡೆದುಕೊಂಡಿದ್ದಾರೆ. ಅಲ್ಲದೆ, 50 ರಿಂದ 60 ಕೋಟಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್‌ನನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಮನೆಯ ಮೇಲೆ ಮತ್ತು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿರುವ ಬಿ.ನಾಗೇಂದ್ರ ನಿವಾಸದ ಮೇಲೂ ಮೂರ್ನಾಲ್ಕು ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನೂ ಪರಿಶೀಲಿಸಿದ್ದಾರೆ. ಜೊತೆಗೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್, ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಒಟ್ಟು 10 ಮಂದಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ದೇವರಾಜು ಹಾಗೂ ಕುಟುಂಬದವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರರು ದೂರು ದಾಖಲಿಸಿದ್ದಾರೆ. ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಅವರು ಪತ್ರ ಬರೆದಿದ್ದಾರೆ. ಈ ಮಧ್ಯೆ ಮೂಡಾ ಹಗರಣ ಕುರಿತು ಸಿಬಿಐ ತನಿಖೆ ನಡೆಯಬೇಕೆಂದು ಆಗ್ರಹಿಸಿ ಜುಲೈ 12 ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಿನ್ನೆಯಷ್ಟೇ ಬಂಧನಕ್ಕೀಡಾಗಿದ್ದ ಖತರ್ನಾಕ್ ''ಚಡ್ಡಿ ಗ್ಯಾಂಗ್''ನ ನಾಲ್ವರು ದರೋಡೆಕೋರರನ್ನು ಸ್ಥಳ ಮಹಜರಿಗಾಗಿ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಇಂದು ನಡೆದಿದೆ. ಮಂಗಳೂರು ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಗ್ಯಾಂಗ್ ನ ಇಬ್ಬರು ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಶೂಟ್ ಔಟ್ ಮಾಡಿರುವ ಘಟನೆ ಸಮೀಪದ ಪಡುಪಣಂಬೂರು ಮುಲ್ಕಿ ಎಂಬಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ತಗಲಿ ಗಾಯವಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಆರೋಪಿಗಳೆಲ್ಲರೂ ಮಧ್ಯಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
Advertisement